

ವಿಜಯವಾಣಿ ಸುದ್ದಿಜಾಲ ಮಡಿಕೇರಿ
ಗೋಣಿಕೊಪ್ಪದಲ್ಲಿ ನಿರ್ಮಾಣ ಹಂತದಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಭವನಕ್ಕೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ೧೦ ಲಕ್ಷ ರೂಪಾಯಿ ಬಿಡುಗಡೆ ಮಾಡಲಾಗುವುದೆಂದು ಅಧ್ಯಕ್ಷ ಡಾ.ಸಿ.ಸೋಮಶೇಖರ ಘೋಷಿಸಿದರು. ಮಂಗಳವಾರ ಭವನ ಕಾಮಗಾರಿ ಪರಿಶೀಲಿಸಿದ ಬಳಿಕ ಈ ಘೋಷಣೆ ಮಾಡಿದರು.
ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಭವನದ ಕಾಮಗಾರಿ ಸ್ಥಗಿತಗೊಂಡಿರುವ ಬಗ್ಗೆ ಮಾಹಿತಿ ಪಡೆದರು. ಗಡಿ ಪ್ರದೇಶದಲ್ಲಿ ಕನ್ನಡ ಮತ್ತು ಸಂಸ್ಕೃತಿಯ ಕಲಾ ಪ್ರಕಾರಗಳನ್ನು ಹೆಚ್ಚಿಸಲು ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಭವನದ ಅಗತ್ಯವಿದೆ. ಗಡಿ ಭಾಗದಲ್ಲಿ ವಿವಿಧ ಸಾಂಸ್ಕೃತಿಕ ಚಟುವಟಿಕೆ ನಡೆಸಲು ಸಭಾ ಭವನ ಅಗತ್ಯವಿದ್ದು, ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಭವನ ಕಾಮಗಾರಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಸಿಎಸ್‌ಆರ್ ನಿಧಿ ಬಳಸಿಕೊಳ್ಳುವಂತೆ ಸಲಹೆ ಮಾಡಿದರು.
ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರನ್ನು ಸ್ಮರಿಸುವುದು ಎಲ್ಲರ ಕರ್ತವ್ಯವಾಗಿದೆ. ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಭವನದಲ್ಲಿ ಕಲೆ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆ ನಡೆಯುವಂತಾಗಬೇಕೆಂದರು.
ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಭವನ ಸಮಿತಿ ಅಧ್ಯಕ್ಷ ಸಿ.ಪಿ.ಬೆಳ್ಯಪ್ಪ, ನಿರ್ದೇಶಕರಾದ ಕಾಕಮಾಡ ಚಂಗಪ್ಪ, ಅಜ್ಜಿಕುಟ್ಟೀರ ಶಾಂತ ಪೂಣಚ್ಚ, ಸಂಯೋಜಕರಾದ ಡಾ.ಜೆ.ಸೋಮಣ್ಣ, ಎಂ.ಎಸ್.ಕುಶಾಲಪ್ಪ ಮತ್ತಿತರರು ಇದ್ದರು.