

ಉಡುಪಿ: ನಗರದ ಬ್ರಹ್ಮಗಿರಿ ಜಂಕ್ಷನ್‌ನಿಂದ ನಾರಾಯಣಗುರು ಮಂದಿರದವರೆಗಿನ ರಸ್ತೆಗೆ ಡಾ. ಜಿ.ಶಂಕರ್ ರಸ್ತೆ ಎಂದು ನಾಮಕರಣ ಮಾಡಲಾಗಿದ್ದು, ಭಾನುವಾರ ಶಾಸಕ ಕೆ.ರಘುಪತಿ ಭಟ್ ಹಾಗೂ ಜಿಲ್ಲಾಧಿಕಾರಿ ಜಿ. ಜಗದೀಶ್ ನಾಮ ಫಲಕ ಅನಾವರಣಗೊಳಿಸಿದರು.
ಆರೋಗ್ಯ, ಶಿಕ್ಷಣ, ಕ್ರೀಡೆ, ಸಾಂಸ್ಕೃತಿಕ, ಪರಂಪರೆ ಧಾರ್ಮಿಕ ಕ್ಷೇತ್ರಗಳು ಸೇರಿದಂತೆ ಸಮಾಜದ ಪ್ರಮುಖ ಕ್ಷೇತ್ರಗಳಲ್ಲಿ ಗಣನೀಯ ಕೊಡುಗೆಗಳನ್ನು ನೀಡಿ ಸಮಾಜಮುಖಿಯಾಗಿ ಸೇವೆ ಸಲ್ಲಿಸುತ್ತಿರುವ ಉದ್ಯಮಿ ಡಾ.ಜಿ. ಶಂಕರ್ ಹೆಸರನ್ನು ಉಡುಪಿಯ ಪ್ರಮುಖ ರಸ್ತೆಗೆ ಇಡಲು ರಾಜ್ಯ ಸರ್ಕಾರ ಅನುಮೋದನೆ ನೀಡಿತ್ತು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ್ ಬಾಬು, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಉಡುಪಿ ನಗರಸಭೆಯ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಉಡುಪಿ ದಕ್ಷಿಣ ಕನ್ನಡ ಮೀನುಗಾರಿಕಾ ಫೆಡರೇಶನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಟ್ ವೈ, ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ಶ್ಯಾಮಿಲಿ ಶಂಕರ್ ಉಪಸ್ಥಿತರಿದ್ದರು.