

ವಿಜಯವಾಣಿ ಸುದ್ದಿಜಾಲ ಸಿದ್ದಾಪುರ
ಹಿಂದಿನಿಂದಲೂ ಸಮಾಜದಲ್ಲಿ ಕಟ್ಟ ಕಡೆಯ ಪ್ರಜೆಗಳು ಎಂದು ಕರೆಸಿಕೊಳ್ಳುವ, ತೀರಾ ಹಿಂದುಳಿದ ಕೊರಗ ಜನಾಂಗಕ್ಕೆ ಮನೆ ನಿರ್ಮಿಸಿ ಕೊಡುವ ಕಾರ್ಯ ಶ್ರೇಷ್ಠ ಕಾರ್ಯವಾಗಿದೆ. ಜನ್ನಾಡಿಯಲ್ಲಿ ಸುಸಜ್ಜಿತವಾದ 14 ಮನೆಗಳನ್ನು ನಿರ್ಮಿಸಿಕೊಟ್ಟು ಇಂದು ಉಳ್ಳೂರು-74 ಗ್ರಾಮದಲ್ಲಿ 14 ನೂತನ ಮನೆಗಳ ನಿರ್ಮಾಣಕ್ಕೆ ಮುಂದಾಗಿರುವ ಡಾ.ಎಚ್.ಎಸ್ ಶೆಟ್ಟಿ ಅವರ ಶ್ರೇಷ್ಠ ಕಾರ್ಯ ಮೇಲ್ಪಂಕ್ತಿಯಾಗಬೇಕು ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು.
ಬೆಂಗಳೂರಿನ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಉಳ್ಳೂರು-74 ಗ್ರಾಮದಲ್ಲಿ 2.5 ಕೋಟಿ ರೂ. ವೆಚ್ಚದಲ್ಲಿ 14 ಕೊರಗರ ನೂತನ ಮನೆಗಳ ನಿರ್ಮಾಣಕ್ಕೆ ಸೋಮವಾರ ಶಿಲಾನ್ಯಾಸ ನೆರವೇರಿಸಿ ಆಶೀರ್ವಚನ ನೀಡಿದರು.
ಸಂಸದ ಕೋಟ ಶ್ರೀನಿವಾಸ ಪೂಜಾರಿ ಶುಭಾಶಂಸನೆಗೈದರು. ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅಧ್ಯಕ್ಷತೆ ವಹಿಸಿದ್ದರು.
ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಡಾ.ಎಚ್.ಎಸ್.ಶೆಟ್ಟಿ, ಕುಂದಾಪುರ ಶಾಸಕ ಎ.ಕಿರಣ್‌ಕುಮಾರ ಕೊಡ್ಗಿ, ಉಡುಪಿ ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಳಿ ಕಡೆಕಾರ್, ಉಳ್ಳೂರು-74 ಶ್ರೀ ಬನಶಂಕರಿ ದೇವಸ್ಥಾನದ ಆಡಳಿತ ಮೊಕ್ತೇಸರ ಎಸ್.ಸಂಜೀವ ಶೆಟ್ಟಿ ಸಂಪಿಗೇಡಿ, ಕರ್ನಾಟಕ- ಕೇರಳ ಕೊರಗಾಭಿವೃದ್ಧಿ ಸಂಸ್ಥೆ ಅಧ್ಯಕ್ಷೆ ಸುಶೀಲಾ ನಾಡ, ಉಳ್ಳೂರು-74 ಗ್ರಾ.ಪಂ. ಅಧ್ಯಕ್ಷೆ ಕುಸುಮಾ ಶೆಟ್ಟಿ, ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೆಬಲ್ ಟ್ರಸ್ಟ್ ಉಪಾಧ್ಯಕ್ಷ ಹಾಲಾಡಿ ನಾಗರಾಜ ಶೆಟ್ಟಿ ಉಪಸ್ಥಿತರಿದ್ದರು.
ದಾಮೋದರ ಶರ್ಮ ಸ್ವಾಗತಿಸಿ, ನಿರೂಪಿಸಿದರು.
ಸಮಾಜದಲ್ಲಿ ನೊಂದ ಹಾಗೂ ಅತ್ಯಂತ ಹಿಂದುಳಿದವರು ಕೊರಗರು. ಕೊರಗ ಜನಾಂಗ ಮುಖ್ಯವಾಹಿನಿಗೆ ಬರಬೇಕೆಂಬ ಉದ್ದೇಶದಿಂದ 100 ಮನೆಗಳನ್ನು ನಿರ್ಮಾಣ ಮಾಡಿ ಕೊಡುತ್ತಿದ್ದೇವೆ. ಕೊರಗರ ಮನೆ ನಿರ್ಮಾಣ ಕಾರ್ಯಕ್ಕೆ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರು ಪ್ರೇರಣೆ.
ಡಾ.ಎಚ್.ಎಸ್.ಶೆಟ್ಟಿ, ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ