ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಗೆ ಡಾ.ಹಂಸಲೇಖ ಆಯ್ಕೆ: ಕರ್ನಾಟಕ ಸಂಘದಿಂದ ಜೂ.30ರಂದು ಪ್ರದಾನ

Karanaraka Sanga Press Meet Mandya
oppo_0
Published on

ಮಂಡ್ಯ: ಕರ್ನಾಟಕ ಸಂಘದಿಂದ ಕೊಡಮಾಡುವ ‘ನಾಲ್ವಡಿ ಕೃಷ್ಣರಾಜ ಒಡೆಯರ್ ರಾಜ್ಯಮಟ್ಟದ ಪ್ರಶಸ್ತಿ’ಗೆ ಖ್ಯಾತ ಸಂಗೀತ ನಿರ್ದೇಶಕ ಡಾ.ಹಂಸಲೇಖ ಆಯ್ಕೆಯಾಗಿದ್ದಾರೆ ಎಂದು ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ ತಿಳಿಸಿದರು.
ಕರ್ನಾಟಕ ಎಂ.ಎಲ್.ಶ್ರೀಕಂಠೇಶಗೌಡ ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಪ್ರಸಕ್ತ ಸಾಲಿನಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಮಾಜಮುಖಿ ವ್ಯಕ್ತಿತ್ವದ ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ ಬಗ್ಗೆ ದೃಶ್ಯ ಸಂಗೀತ ಕಾವ್ಯ ರಚಿಸಿರುವ ಡಾ.ಹಂಸಲೇಖ ಅವರಿಗೆ ಜೂ.30ರಂದು ನಗರದ ರೈತ ಸಭಾಂಗಣದಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ಒಂದು ಲಕ್ಷ ರೂ ನಗದಿನ ಜತೆಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಅಂದು ಮಧ್ಯಾಹ್ನ 3ಗಂಟೆಗೆ ಕಾರ್ಯಕ್ರಮದ ಸಾನಿಧ್ಯವನ್ನು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಕೊಮ್ಮೇರಹಳ್ಳಿ ಶಾಖಾ ಮಠದ ಮುಖ್ಯಸ್ಥ ಪುರುಷೋತ್ತಮಾನಂದನಾಥ ಸ್ವಾಮೀಜಿ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸಮಾರಂಭ ಉದ್ಘಾಟಿಸಲಿದ್ದು, ಶಾಸಕ ರವಿಕುಮಾರ್ ಗಣಿಗ ಅಧ್ಯಕ್ಷತೆ ವಹಿಸಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್.ತಂಗಡಗಿ ಪ್ರಶಸ್ತಿ ಪ್ರದಾನ ಮಾಡಲಿದ್ದು, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ನಾಲ್ವಡಿ ಅವರ ಭಾವಚಿತ್ರ ಅನಾವರಣಗೊಳಿಸಲಿದ್ದಾರೆ. ನಾಲ್ವಡಿ ಕುರಿತು ಬೆಂಗಳೂರು ಕೇಂದ್ರ ವಲಯ ಐಜಿಪಿ ಡಾ.ಬಿ.ಆರ್.ರವಿಕಾಂತೇಗೌಡ ಮಾತನಾಡಲಿದ್ದಾರೆ. ಎಂಎಲ್‌ಸಿ ಮಧು ಜಿ.ಮಾದೇಗೌಡ, ಮಾಜಿ ಶಾಸಕರಾದ ಎಂ.ಶ್ರೀನಿವಾಸ್, ಬಿ.ರಾಮಕೃಷ್ಣ, ಕೆ.ಟಿ.ಶ್ರೀಕಂಠೇಗೌಡ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.
ಸಂಘದ ಉಪಾಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್, ಖಜಾಂಚಿ ಎಂ.ಎಸ್.ಮಂಜುಳಾ ಉದಯಶಂಕರ್, ನಿರ್ದೇಶಕ ನಾಗಪ್ಪ ಇದ್ದರು.

Hamsalekha
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net