ಸಾಹಿತಿ ಡಾ. ಕಮಲಾ ಹಂಪನಾ ಹೃದಯಾಘಾತದಿಂದ ನಿಧನ

Sudhee_22_Kamala_Hampana_Demise_@_Samsa (18)
Published on

ಬೆಂಗಳೂರು: ಹಿರಿಯ ಸಾಹಿತಿ ಡಾ. ಕಮಲಾ ಹಂಪನಾ (89) ಅವರು ಹೃದಯಾಘಾತದಿಂದಾಗಿ ಶನಿವಾರ ಮುಂಜಾನೆ ನಿಧನರಾಗಿದ್ದಾರೆ.

ವಯೋಸಹಜ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಅವರು, ಕ್ರೆಸೆಂಟ್ ರಸ್ತೆಯಲ್ಲಿರುವ ಪುತ್ರಿಯ ನಿವಾಸದಲ್ಲಿ ರಾತ್ರಿ ನಿದ್ರಿಸುವಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸಾಹಿತಿ, ಸಂಶೋಧಕರಾಗಿರುವ ಪತಿ ಡಾ. ಹಂ.ಪ. ನಾಗರಾಜಯ್ಯ, ಇಬ್ಬರು ಪುತ್ರಿಯರು ಮತ್ತು ಓರ್ವ ಪುತ್ರ ಸೇರಿ ಬಂಧುಮಿತ್ರರು ಹಾಗೂ ಅಪಾರ ಅಭಿಮಾನಿ ಬಳಗವನ್ನು ಅಗಲಿದ್ದಾರೆ.

ಬೆಳಗ್ಗೆ ಪುತ್ರಿಯ ನಿವಾಸದಿಂದ ರಾಜಾಜಿನಗರದಲ್ಲಿರುವ ಅವರ ಸ್ವಗೃಹಕ್ಕೆ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಯಿತು. ಬಳಿಕ ಅಲ್ಲಿಂದ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿರುವ ಸಂಸ ಬಯಲು ರಂಗಮಂದಿರದಲ್ಲಿ ಮಧ್ಯಾಹ್ನ 3 ಗಂಟೆ ವರೆಗೆ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿತ್ತು.

ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಶಿವರಾಜ ತಂಗಡಗಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ನಿಡುಮಾಮಿಡಿ ಮಠದ ಶ್ರೀ ವೀರಭದ್ರ ಚನ್ನಮಲ್ಲ ಸ್ವಾಮೀಜಿ, ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ, ಎಸ್.ಜಿ. ಸಿದ್ದರಾಮಯ್ಯ, ಕೆ. ಮರುಳ ಸಿದ್ದಪ್ಪ, ನಿದೇರ್ಶಕ ಟಿ.ಎಸ್. ನಾಗಾಭರಣ, ನಾಟಕ ಅಕಾಡೆಮಿ ಅಧ್ಯಕ್ಷ ಕೆ.ವಿ. ನಾಗರಾಜಮೂರ್ತಿ, ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ. ಮಹೇಶ ಜೋಶಿ, ಲೇಖಕಿ ಡಾ. ವಿಜಯಮ್ಮ ಸೇರಿ ಸಾಹಿತ್ಯ, ರಂಗಭೂಮಿ, ರಾಜಕೀಯ ಸೇರಿ ವಿವಿಧ ಕ್ಷೇತ್ರಗಳ ಪ್ರಮುಖರು ಹಾಗೂ ಅವರ ಅಪಾರ ಶಿಷ್ಯವೃಂದ ಅಂತಿಮ ದರ್ಶನ ಪಡೆದರು. ಕುಟುಂಬದವರಿಗೆ ಸಾಂತ್ವಾನ ಹೇಳಿದರು.

ದೇಹದಾನ:

ಸಾರ್ವಜನಿಕ ದರ್ಶನಾ ನಂತರ ಕಮಲಾ ಹಂಪನಾ ಅವರ ಇಚ್ಛೆತೆಯಂತೆ ಅವರ ಕಣ್ಣು ಮತ್ತು ದೇಹವನ್ನು ನಗರದ ರಾಮಯ್ಯ ವೈದ್ಯಕೀಯ ಕಾಲೇಜಿಗೆ ದಾನ ಮಾಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net