

ಮಂಗಳೂರು : ವಿಕಸಿತ ಭಾರತ ನಿರ್ಮಾಣದಲ್ಲಿ ಸಹಕಾರ ಸಂಘಗಳ ಪಾತ್ರ ಎಂಬ ಧ್ಯೇಯದೊಂದಿಗೆ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ನ.14ರಿಂದ 20ರವರೆಗೆ ರಾಷ್ಟ್ರದಾದ್ಯಂತ ಆಚರಿಸಲಾಗುತ್ತಿದೆ. ಸಹಕಾರ ಸಪ್ತಾಹದ ಮೂರನೇ ದಿನ ಉದ್ಯಮಶೀಲತೆ, ಉದ್ಯೋಗ ಮತ್ತು ಕೌಶಲಾಭಿವೃದ್ಧಿಯನ್ನು ಉತ್ತೇಜಿಸುವಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ಎಂಬ ವಿಚಾರವಾಗಿ ರಾಜ್ಯಮಟ್ಟದ ಕಾರ್ಯಕ್ರಮ ನ.16ರಂದು ಮಂಗಳೂರಿನಲ್ಲಿ ನಡೆಯಲಿದೆ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನ.16ರಂದು ಬೆಳಗ್ಗೆ 10ಕ್ಕೆ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುವ ಸಹಕಾರ ಸಪ್ತಾಹವನ್ನು
ಸಹಕಾರ ಸಚಿವ ಕೆ. ಎನ್.ರಾಜಣ್ಣ ಉದ್ಘಾಟಿಸಲಿದ್ದಾರೆ. ಸ್ಪೀಕರ್ ಯು.ಟಿ.ಖಾದರ್ ವಸ್ತುಪ್ರದರ್ಶನ ಮಳಿಗೆಗಳನ್ನು ಹಾಗೂ ಶಾಸಕ ವೇದವ್ಯಾಸ ಕಾಮತ್ ಸಹಕಾರ ಜಾಥಾವನ್ನು ಉದ್ಘಾಟಿಸಲಿದ್ದಾರೆ. ಸಂಸದ ಕ್ಯಾ.ಬ್ರಿಜೇಶ್ ಚೌಟ ಧ್ವಜಾರೋಹಣ ನೆರವೇರಿಸಲಿದ್ದಾರೆ. ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರದಾನವನ್ನು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಶತಮಾನೋತ್ಸವ ಪೂರೈಸಿದ ಸಹಕಾರ ಸಂಘಗಳಿಗೆ ಪುರಸ್ಕಾರವನ್ನು ಶಾಸಕ ಲಕ್ಷ್ಮಣ ಸವದಿ ಹಾಗೂ ಉತ್ತಮ ಸ್ವ-ಸಹಾಯ ಸಂಘಗಳಿಗೆ ಪುರಸ್ಕಾರವನ್ನು ಶಾಸಕ, ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ. ದೇವೇಗೌಡ ಇವರು ನೆರವೇರಿಸಲಿದ್ದಾರೆ.
ಶಾಸಕರಾದ ಡಾ.ಭರತ್ ಶೆಟ್ಟಿ ವೈ., ಯಶ್‌ಪಾಲ್ ಸುವರ್ಣ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್ ಡಿಸೋಜಾ, ಕಿಶೋರ್ ಕುಮಾರ್ ಬೊಟ್ಯಾಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ನಬಾರ್ಡ್‌ನ ಮುಖ್ಯ ಮಹಾ
ಪ್ರಬಂಧಕ ಎಸ್.ಎಲ್.ವಿ. ಪ್ರಸಾದ್ ರಾವ್, ಮಂಗಳೂರು ಮೇಯರ್ ಮನೋಜ್ ಕುಮಾರ್ ಕೋಡಿಕಲ್ ,ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ ಗೌರವ ಉಪಸ್ಥಿತರಿರುವರು ಎಂದು ಅವರು ತಿಳಿಸಿದರು.
* ಸಹಕಾರ ಮಾಣಿಕ್ಯ ಪ್ರಶಸ್ತಿ
ಅವಿಭಜಿತ ದ.ಕ.ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉತ್ತಮ ಸಹಕಾರಿ ಸಂಘಗಳನ್ನು ಗುರುತಿಸುವ ಉದ್ದೇಶದಿಂದ 2024ನೇ ಸಾಲಿನಿಂದ ಅಖಿಲ ಭಾರತ ಸಹಕಾರ ಸಪ್ತಾಹದ ಸಂದರ್ಭ ಸಹಕಾರ ಮಾಣಿಕ್ಯ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಉಭಯ ಜಿಲ್ಲೆಗಳಿಂದ ತಲಾ ಒಂದರಂತೆ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಹಾಗೂ ಕ್ರೆಡಿಟ್ ಕೋ-ಅಪರೇಟಿವ್ ಸಹಕಾರ ಸಂಘಕ್ಕೆ ಉಭಯ ಜಿಲ್ಲೆಗಳಿಂದ ಒಂದು ಪ್ರಶಸ್ತಿ ನೀಡಲಾಗುವುದು. ಸಹಕಾರ ಮಾಣಿಕ್ಯ ಪ್ರಶಸ್ತಿಯ ಜತೆಗೆ 5 ಗ್ರಾಂ ಚಿನ್ನದ ಪದಕ, 10 ಸಾವಿರ ರೂ. ನಗದು ಹಾಗೂ ಪಾರಿತೋಷಕವನ್ನು ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದರು.
* ಸಹಕಾರ ಜಾಥಾ :
ಸಹಕಾರ ಸಪ್ತಾಹದ ಅಂಗವಾಗಿ ಅದ್ದೂರಿಯ ಸಹಕಾರ ಜಾಥಾ ಆಯೋಜನೆ ಮಾಡಲಾಗಿದೆ. ಬೆಳಗ್ಗೆ 9ಕ್ಕೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಆವರಣದಿಂದ ಕರಾವಳಿ ಉತ್ಸವ ಮೈದಾನದವರೆಗೆ ಸಾಂಸ್ಕೃತಿಕ ಕಲಾಪ್ರಕಾರಗಳ ಹಾಗೂ ಸಹಕಾರ ಕ್ಷೇತ್ರಕ್ಕೆ ಸಂಬಂಧಿಸಿದ 30 ವಿವಿಧ ಟ್ಯಾಬ್ಲೋಗಳೊಂದಿಗೆ ಮೆರವಣಿಗೆ ನಡೆಯಲಿದೆ ಎಂದು ಡಾ. ಎಂ.ಎನ್. ರಾಜೇಂದ್ರ ಕುಮಾರ್ ವಿವರ ನೀಡಿದರು.