

ಮಂಡ್ಯ: ವರನಟ ಡಾ.ರಾಜ್‌ಕುಮಾರ್ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವ ಮಂಗಳೂರಿನ ವಿನೋದ್ ಶೆಟ್ಟಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದರ ಜತೆಗೆ ಸಾಮಾಜಿಕ ಜಾಲತಾಣಗಳ ದುರ್ಬಳಕೆಗೆ ಸರ್ಕಾರ ಕಡಿವಾಣ ಹಾಕಬೇಕು ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್ ಶೆಟ್ಟಿ ಬಣ) ಜಿಲ್ಲಾಧ್ಯಕ್ಷ ಡಿ.ಅಶೋಕ್ ಒತ್ತಾಯಿಸಿದರು.
ಪ್ರಸ್ತುತ ದಿನಗಳಲ್ಲಿ ಸಾಮಾಜಿಕ ಜಾಲತಾಣ ಬಳಸಿಕೊಳ್ಳುವ ಕಿಡಿಗೇಡಿಗಳು ರಾತ್ರೋರಾತ್ರಿ ಪ್ರಚಲಿತಕ್ಕೆ ಬರಲು ಇಲ್ಲಸಲ್ಲದ ರೀತಿ ವಿಕೃತ ಮನಸ್ಥಿತಿ ಪ್ರದರ್ಶಿಸುತ್ತಿದ್ದಾರೆ. ಆತ ರಾಜ್‌ಕುಮಾರ್ ಅವರನ್ನು ಮಾತ್ರವಲ್ಲದೇ ಹಿರಿಯ ನಟಿ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದು, ಆ ವ್ಯಕ್ತಿ ಸಭಾಪತಿ ಯು.ಟಿ.ಖಾದರ್ ಕ್ಷೇತ್ರದವನೇ ಆಗಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆತನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಈ ಸಂಬಂಧ ಜಿಲ್ಲಾ ಎಸ್ಪಿಗೆ ದೂರು ನೀಡಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಜಯಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಯೋಗಣ್ಣ ಮಾತನಾಡಿ, ಕನ್ನಡ ಚಿತ್ರರಂಗದ ಆರಾಧ್ಯ ದೈವ ಡಾ.ರಾಜ್‌ಕುಮಾರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ವಿನೋದ್ ಶೆಟ್ಟಿಯನ್ನು ಗಡಿಪಾರು ಮಾಡುವಂತೆ ಆಗ್ರಹಿಸಿದರು.
ರವೀಂದ್ರಕುಮಾರ್, ಶ್ರೀನಿವಾಸ್, ದೇವರಾಜು, ಜೆ.ನಾರಾಯಣ, ಕಾರ್ತಿಕ್ ಇದ್ದರು.