

ಬೆಂಗಳೂರು: ರಾಜ್ಯ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆಯ ಕರಡು ಮತದಾರರ ಪಟ್ಟಿಯನ್ನು ಗುರುವಾರ ಪ್ರಕಟಿಸಿದ್ದು, ಡಿ.9ರವರೆಗೂ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ.
ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಗುರುವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಾಲಿಕೆಯ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಆರ್. ರಾಮಚಂದ್ರನ್, ಕರಡು ಪಟ್ಟಿಯಲ್ಲಿರುವ ಮಾಹಿತಿಯನ್ನು ಬಿಡುಗಡೆಗೊಳಿಸಿದರು.
ಬಿಬಿಎಂಪಿ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳ ಪೈಕಿ ಪದವೀಧರರ ಕ್ಷೇತ್ರ ಚುನಾವಣೆಗೆ ಒಟ್ಟು 39,858 ಮತದಾರರು ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆಗೆ 6,343 ಮತದಾರರು ನೋಂದಣಿ ಮಾಡಿಕೊಂಡಿಕೊಂಡಿದ್ದಾರೆ. ಕರಡು ಪಟ್ಟಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಡಿ.9ರೊಳಗೆ ಸಂಬಂಧಪಟ್ಟ ಮತದಾರರ ನೋಂದಣಿ ಅಧಿಕಾರಿಗಳಿಗೆ ಸಲ್ಲಿಸಬಹುದು. ಡಿ.30ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು. ಹೆಚ್ಚಿನ ಸಂಖ್ಯೆಯ ಪದವೀಧರರು ಮತ್ತು ಶಿಕ್ಷಕರನ್ನು ಸೇರ್ಪಡೆ ಮಾಡಿಕೊಳ್ಳಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಅಂಚೆ ಮೂಲಕ ಗುರುತಿನ ಚೀಟಿ ವಿತರಣೆ:
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಗುರುತಿನ ಚೀಟಿಗಳನ್ನು ಅಂಚೆ ಮೂಲಕ ವಿತರಿಸಲಾಗುತ್ತಿದೆ. ಅದರಂತೆ ಬೆಂಗಳೂರು ಕೇಂದ್ರದಲ್ಲಿ 44 ಸಾವಿರ, ಬೆಂಗಳೂರು ಉತ್ತರದಲ್ಲಿ 52 ಸಾವಿರ, ಬೆಂಗಳೂರು ದಕ್ಷಿಣದಲ್ಲಿ 42,350 ಹಾಗೂ ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ 97,000 ಮತದಾರರ ಗುರುತಿನ ಚೀಟಿಗಳನ್ನು ವಿತರಿಸುವ ಪ್ರಕ್ರಿಯೆ ನಡೆದಿದೆ. ಮುಂದಿನ 15 ದಿನಗಳಲ್ಲಿ ಹೊಸ ಮತದಾರರ ಗುರುತಿನ ಚೀಟಿ ತಲುಪಿಸಲಾಗುವುದು ಎಂದು ರಾಮಚಂದ್ರನ್ ವಿವರಿಸಿದರು.
ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ, ಬಿಬಿಎಂಪಿ ಚುನಾವಣಾ ವಿಭಾಗದ ಸಹಾಯಕ ಆಯುಕ್ತ ಅಜಯ್ ಹಾಗೂ ಪಾಲಿಕೆ ವ್ಯಾಪ್ತಿಯ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಗಳು ಉಪಸ್ಥಿತರಿದ್ದರು.
ಲೋಕಸಭಾ ಚುನಾವಣೆಗೆ ಸಿದ್ದತೆ:
ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಸಂಬಂಧ ನಗರದಲ್ಲಿ ವಿಶೇಷ ಅಭಿಯಾನ ಹಮ್ಮಿಕೊಂಡು ನಮೂನೆ-6, 7, 8ನ್ನು ನೀಡಿ ನೋಂದಣಿ ಮಾಡಿಕೊಳ್ಳುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಮೃತ ಪಟ್ಟಿರುವವರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಪ್ರಕ್ರಿಯೆ ಕೂಡ ನಡೆಯುತ್ತಿದ್ದು, ಜ.5 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.
ಎರಡು ಕಡೆ ಹೆಸರಿದ್ದವರಿಗೆ ನೋಟಿಸ್:
ಮತದಾರರ ಪಟ್ಟಿಯಲ್ಲಿ ಒಂದಕ್ಕಿಂತ ಹೆಚ್ಚು ಕಡೆಗಳಲ್ಲಿ ಹೆಸರು ಇದ್ದವರಿಗೆ ನೋಟಿಸ್ ನೀಡಲಾಗುತ್ತಿದೆ. ಆಯೋಗದ ನಿರ್ದೇಶನದಂತೆ ಈ ಕ್ರಮ ಕೈಗೊಂಡಿದ್ದು, ರಾಜ್ಯದಲ್ಲಿ ಒಂದು ಕಡೆ ಮಾತ್ರ ಹೆಸರು ಇರಬೇಕು. ಹೆಚ್ಚು ಕಡೆ ಹೆಸರಿದ್ದಲ್ಲಿ ಅವುಗಳಲ್ಲಿ ಒಂದು ಸ್ಥಳದಲ್ಲಿ ಮಾತ್ರ ಉಳಿಸಿಕೊಳ್ಳಲು ಅವಕಾಶವನ್ನು ಮತದಾರರ ವಿವೇಚನೆಗೆ ಬಿಡಲಾಗಿದೆ ಎಂದು ರಾಮಚಂದ್ರನ್ ತಿಳಿಸಿದರು.