ಕರ್ತವ್ಯನಿರತ ಡಿಆರ್​ಡಿಒ ಸಿಬ್ಬಂದಿ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

Crime
Published on

ಬೆಂಗಳೂರು: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಭದ್ರತಾ ವಿಭಾಗದ ಸಿಬ್ಬಂದಿಯೊಬ್ಬರು ಕರ್ತವ್ಯ ನಿರ್ವಹಣೆ ವೇಳೆ ತಮ್ಮ ಸರ್ವಿಸ್ ಬಂದೂಕಿನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ.

ನಾಗಸಂದ್ರ ನಿವಾಸಿ ಕರೇಗೌಡ (49) ಮೃತಪಟ್ಟವರು. ಬೈಯಪ್ಪನಹಳ್ಳಿ ಸಮೀಪದ ಡಿಆರ್‌ಡಿಒ ಭದ್ರತಾ ವಿಭಾಗದಲ್ಲಿ ಸಿಪಾಯಿಯಾಗಿ ಕೆಲಸ ಮಾಡುತ್ತಿದ್ದ ಕರೇಗೌಡ, ಬೆಳಗ್ಗೆ 6 ಗಂಟೆಗೆ ಕರ್ತವ್ಯಕ್ಕೆ ಹಾಜರಾಗಿದ್ದರು. 6.30ರ ಸುಮಾರಿಗೆ ತಮ್ಮ ಸರ್ವಿಸ್ ಬಂದೂಕಿನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕರೇಗೌಡ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ನಾಗಸಂದ್ರದಲ್ಲಿ ನೆಲೆಸಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳದಲ್ಲಿ ಯಾವುದೇ ಮರಣಪತ್ರವೂ ಸಿಕ್ಕಿಲ್ಲ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net