

ಮೈಸೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್‌ಟಬಲ್ ಹಾಗೂ ಸೇವಾನಿರತ ಬ್ಯಾಕ್‌ಲಾಗ್ ಹುದ್ದೆಗ ಳಿಗೆ ಫೆ.25 ರಂದು ಬೆ.11 ರಿಂದ 12.30ರವರೆಗೆ ರಾಜ್ಯಾದ್ಯಂತ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ವಸ್ತ್ರಸಂಹಿತೆ ಜಾರಿಗೊಳಿಸಲಾಗಿದೆ.
ಪುರುಷ ಮತ್ತು ತೃತೀಯಲಿಂಗಿ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‌ಗಳನ್ನು ಕಡ್ಡಾಯವಾಗಿ ಧರಿಸಬೇಕು. ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್‌ಗಳನ್ನು ಧರಿಸಬೇಕು. ಜಿಪ್ ಪಾಕೇಟ್‌ಗಳು, ದೊಡ್ಡ ಬಟನ್‌ಗಳು ಇರುವ ಶರ್ಟ್‌ಗಳನ್ನು ಧರಿಸುವಂತಿಲ್ಲ. ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‌ಗಳನ್ನು ಧರಿಸುವಂತಿಲ್ಲ. ಪರೀಕ್ಷಾ ಕೇಂದ್ರದೊಳಗೆ ಶೂಗಳನ್ನು ನಿಷೇಧಿಸಲಾಗಿದ್ದು, ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು ಧರಿಸಬೇಕು. ಕುತ್ತಿಗೆ ಸುತ್ತ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಳನ್ನು ಧರಿಸುವುದು ನಿಷೇಧಿಸಲಾಗಿದೆ.
ಮಹಿಳಾ ಮತ್ತು ತೃತೀಯಲಿಂಗ ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್‌ಗಳು ಅಥವಾ ಬಟನ್‌ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಲಾಗಿದೆ. ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು ಹಾಗೂ ಜೀನ್ಸ್ ಪ್ಯಾಂಟ್ ಧರಿಸಬಾರದು. ಅರ್ಧ ತೋಳಿನ ಬಟ್ಟೆಗಳನ್ನು ಧರಿಸಬೇಕು. ಎತ್ತರವಾದ ಹಿಮ್ಮಡಿಯ ಶೂಗಳನ್ನು ಅಥವಾ ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ, ಚಪ್ಪಲಿಗಳನ್ನಾಗಲಿ ಧರಿಸಬಾರದು. ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ. ಮಹಿಳಾ ಮತ್ತು ತೃತೀಯ ಲಿಂಗ ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದು ನಿಷೇಧಿಸಲಾಗಿದೆ (ಮಂಗಳಸೂತ್ರ ಮತ್ತು ಕಾಲುಂಗುರು ಹೊರತುಪಡಿಸಿ) ಎಂದು ಪ್ರಕಟಣೆತಿಳಿಸಿದೆ.