ಅರಮನೆಯಲ್ಲಿ ಬಿಗಡಾಯಿಸಿದ ನೀರಿನ ಸಮಸ್ಯೆ..!

palace
Published on

ಮೈಸೂರು: ಕೆಆರ್‌ಎಸ್ ಜಲಾಶಯ ನಿರ್ಮಿಸುವ ಮೂಲಕ ಮೈಸೂರು ಮಹಾರಾಜರು ನಗರದ ಜನರಿಗೆ ಕುಡಿಯುವ ನೀರು ಒದಗಿಸಿದರು. ಆದರೆ, ಕಳೆದ ಕೆಲವು ದಿನಗಳಿಂದ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಅರಮನೆಗೆ ನೀರು ಪೂರೈಕೆ ಸ್ಥಗಿತಗೊಂಡಿದ್ದು, ಟ್ಯಾಂಕರ್ ಮೂಲಕ ನೀರು ಪೂರೈಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ಬಿ.ವಿ.ಮಂಜುನಾಥ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ನಗರ ಪಾಲಿಕೆಯ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ ಗುರುವಾರ ಮೇಯರ್ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿದ್ದ ನಗರ ಪಾಲಿಕೆ ಕೌನ್ಸಿಲ್ ಸಭೆಯಲ್ಲಿ ಮಾತನಾಡಿದ ಅವರು, ಅಪಾರ್ಟ್‌ಮೆಂಟ್‌ವೊಂದಕ್ಕೆ ನೀರು ಪೂರೈಸುವ ಉದ್ದೇಶದಿಂದ ಅಧಿಕಾರಿಗಳು ಅರಮನೆಗೆ ಪೂರೈಕೆಯಾಗುತ್ತಿದ್ದ ನೀರಿನ ಪೈಪ್‌ಲೈನ್ ಬಂದ್ ಮಾಡಿದ್ದು, ಕೂಡಲೇ ಆಗಿರುವ ತಪ್ಪನ್ನು ಸರಿಪಡಿಸಬೇಕು. ಅರಮನೆಗೆ ದಿನದ 24 ಗಂಟೆಯೂ ನಿರಂತರವಾಗಿ ನೀರು ಪೂರೈಕೆ ಮಾಡಲು ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಈ ಕುರಿತು ಪ್ರತಿಕ್ರಿಯಿಸಿದ ಮೇಯರ್ ಶಿವಕುಮಾರ್, ಕೂಡಲೇ ಈ ಬಗ್ಗೆ ಅಗತ್ಯ ಕ್ರಮ ವಹಿಸಿ, ಅರಮನೆಗೆ ನಿರಂತರ ನೀರು ಪೂರೈಕೆಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net