

ಮೈಸುರು: ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಹಲವಾರು ಸೇವೆಗಳನ್ನು ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಪಂಚಮಿತ್ರ ಪೋರ್ಟಲ್‌ನ್ನು ಅಭಿವೃದ್ಧಿ ಪಡಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.
ನಗರದ ಜಲದರ್ಶಿನಿಯಲ್ಲಿ ಭಾನುವಾರ ಪಂಚಮಿತ್ರ ಪೋರ್ಟಲ್‌ನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಸಾರ್ವಜನಿಕರು ತಮಗೆ ಅವಶ್ಯಕವಿರುವ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯಲು, ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಸೇವೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು, ಸಲ್ಲಿಸಿದ ಅರ್ಜಿಗಳ ಸ್ಥಿತಿಗತಿಯನ್ನು ಪರಿಶೀಲಿಸಲು ಹಾಗೂ ಕುಂದುಕೊರತೆಗಳನ್ನು ದಾಖಲಿಸಲು ಪಂಚಮಿತ್ರ ವೇದಿಕೆಯು ಅನುಕೂಲವಾಗಲಿದೆ. ಈ ಸೌಲಭ್ಯವನ್ನು ಎಲ್ಲ ಸಾರ್ವಜನಿಕರು ಸದುಪಯೋಗ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ, ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು, ಸಹಾಯಕ ಕಾರ್ಯದರ್ಶಿ ಕುಲದೀಪ್, ಕಾರ್ಯನಿರ್ವಾಹಕ ಅಧಿಕಾರಿಗಳಾದ ಎಂ.ಎಸ್.ಗಿರಿಧರ್, ಬಿ.ಕೆ.ಮನು, ಸಿ.ಕೃಷ್ಣ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಕೆ.ರುಕ್ಮಾಂಗದ, ಪ್ರಕಾಶ್ ಇದ್ದರು.