ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ

17 CRP 03
Published on

ಚನ್ನರಾಯಪಟ್ಟಣ: ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಕೂಲಿ ಕಾರ್ಮಿಕರು ಹಾಗೂ ರೈತರಿಗೆ ನೆರವಾಗುವ ಸಲುವಾಗಿ ನರೇಗಾ ಯೋಜನೆಯಡಿ 53.76 ರೂ. ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು.

ತಾಲೂಕಿನ ಬಾಗೂರು ಹೋಬಳಿಯ ಕೆ.ದಾಸಾಪುರ ಗ್ರಾಮದಲ್ಲಿ ಕೆರೆ ಹೂಳೆತ್ತುವ ಕಾಮಗಾರಿಗೆ ಶನಿವಾರ ಚಾಲನೆ ನೀಡಿ ಮಾತನಾಡಿದ ಅವರು, ಜಲಾನಯನ, ಅರಣ್ಯೀಕರಣ, ಬದು ನಿರ್ಮಾಣ, ಕೃಷಿ ಹೊಂಡ, ಕೆರೆ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಇದರಿಂದಾಗಿ 17 ಲಕ್ಷ ಮಾನವ ದಿನಗಳು ಸೃಷ್ಟಿಯಾಗಲಿದೆ ಎಂದು ತಿಳಿಸಿದರು.

ತಾಲೂಕಿನಲ್ಲಿ 300 ಕೆರೆಗಳ ಹೂಳೆತ್ತುವ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದು, ಈಗಾಗಲೇ 80 ಕೆರೆಗಳ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಕೆಂಬಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ದಾಸಾಪುರ ಕೆರೆಯು 110 ಎಕರೆ ವಿಸ್ತೀರ್ಣ ಹೊಂದಿದ್ದು, 5 ಲಕ್ಷ ರೂ.ವೆಚ್ಚದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು.

ಸರ್ಕಾರವು ದಿನವೊಂದಕ್ಕೆ ಒಬ್ಬ ಕಾರ್ಮಿಕನಿಗೆ 275 ರೂ. ನಂತೆ ಒಟ್ಟು 100 ದಿನಗಳು ಕೆಲಸ ನೀಡಲಿದೆ. ಇದರಿಂದ 27,500 ರೂ. ಹಣ ಸಿಗಲಿದೆ ಎಂದರು.

ಕೆಂಬಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ್, ತಾಲೂಕು ಪಂಚಾಯಿತಿ ಕಾರ್ಯ ನಿರ್ಹಣಾಧಿಕಾರಿ ಎಚ್.ಎಸ್. ಚಂದ್ರಶೇಖರ್, ನರೇಗಾ ಯೋಜನಾಧಿಕಾರಿ ಎ.ಡಿ.ಹರೀಶ್, ಪಿಡಿಒ ಕೃಷ್ಣೇಗೌಡ, ಪ್ರಮುಖರಾದ ಚಂದ್ರಾನಾಯ್ಕ, ಯಶವಂತ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net