

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ದೇವನಹಳ್ಳಿ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ 40.50 ಲಕ್ಷ ರೂ.ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಸಂಸದ ಡಾ.ಕೆ ಸುಧಾಕರ್ ತಿಳಿಸಿದರು.
ದೇವನಹಳ್ಳಿ ತಾಲೂಕು ಬೂದಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೂದಿಗೆರೆ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಆವರಣದಲ್ಲಿ ನೂತನ ಮಾದರಿ ಕೊಠಡಿ ನಿರ್ಮಾಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಂಸದರ ಅನುದಾನದಡಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಹಂತ ಹಂತವಾಗಿ ಎಲ್ಲ ಕಡೆಯಲ್ಲಿಯೂ ಕಾಮಗಾರಿಗಳು ನಡೆಯಲಿವೆ ಎಂದು ತಿಳಿಸಿದರು. ಅನುದಾನ ಹಂಚಿಕೆಯಲ್ಲಿ ಯಾವುದೇ ತಾರತಮ್ಯಮಾಡುವುದಿಲ್ಲ, ಚುನಾವಣೆ ವೇಳೆಯಲ್ಲಷ್ಟೇ ರಾಜಕೀಯವರಿಬೇಕು ಚುನಾವಣೆ ಬಳಿಕ ಅಭಿವೃದ್ಧಿ ಕಾಮಗಾರಿಗಳ ಕಡೆಯಷ್ಟೇ ಗಮನ ಹರಿಸಬೇಕು ಎಂಬ ತತ್ವದಂತೆ ನಡೆಯಲಾಗುತ್ತಿದೆ ಎಂದು ತಿಳಿಸಿದರು. ದೇವನಹಳ್ಳಿ ಕ್ಷೇತ್ರ ವ್ಯಾಪ್ತಿಯಲ್ಲಿ ಏಕಕಾಲದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಅಧಿಕಾರಿಗಳು ಗುಣಮಟ್ಟದ ಕಾಮಗಾರಿ ಕಡೆಗೆ ನಿಗಾವಹಿಸಬೇಕು, ಸಾರ್ವಜನಿಕರು ಇದನ್ನು ಗಮನಿಸುತ್ತಿರುಬೇಕು ಇದರಲ್ಲಿ ಯಾವುದೇ ಲೋಪ ಕಂಡುಬಂದರೆ ಕ್ರಮ ಎದುರಿಸಬೇಕಾಗುತ್ತದೆ ಎಂದು ತಿಳಿಸಿದರು.
ಮೂಲಸೌಕರ್ಯಕ್ಕೆ ಒತ್ತು: ದೇವನಹಳ್ಳಿ ತಾಲೂಕಿನ ಬೂದಿಗೆರೆ ಗ್ರಾಮ ಪಂಚಾಯಿತಿಯ ಬೂದಿಗೆರೆ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ ಸುಮಾರು 15 ಲಕ್ಷ ರೂ.ವೆಚ್ಚದಲ್ಲಿ ಮಾದರಿ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ, ಸರ್ಕಾರಿ ಶಾಲಾ ಮಕ್ಕಳ ಗುಣಮಟ್ಟದ ಶಿಕ್ಷಣ ಹಾಗೂ ಮೂಲಸೌಕರ್ಯಕ್ಕೆ ಒತ್ತು ನೀಡುವ ಸಲುವಾಗಿ ಇಂಥ ಕಾಮಗಾರಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಗ್ರಾಪಂ ಅಧ್ಯಕ್ಷೆ ವರಲಕ್ಷ್ಮೀ ತಿಳಿಸಿದರು.
ಹಲವೆಡೆ ಚಾಲನೆ: ಬಿಜ್ಜವಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಲೇರಹಳ್ಳಿ ಬಸ್‌ತಂಗುದಾಣ ನಿರ್ಮಾಣ ಕಾಮಗಾರಿ, ಗೊಡ್ಲು ಮುದ್ದೇನಹಳ್ಳಿ ಗ್ರಾಮ ಪಂಚಾಯಿತಿಯ ವೆಂಕಟೇನಹಳ್ಳಿಯಲ್ಲಿ ಆರ್‌ಸಿಸಿ ಕಟ್ಟಡದೊಂದಿಗೆ ಶುದ್ಧ ಕುಡಿಯುವ ನೀರಿನ ಘಟಕದ ನಿರ್ಮಾಣ ಕಾಮಗಾರಿ, ಹಾರೋಹಳ್ಳಿ ಗ್ರಾಮ ಪಂಚಾಯಿತಿಯ ಚಿಕ್ಕನಹಳ್ಳಿ ಗ್ರಾಮದಲ್ಲಿ ಹೈ ಮಾಸ್ಟ್ ವಿದ್ಯುತ್ ದೀಪ ಅಳವಡಿಕೆ ಕಾಮಗಾರಿ, ಹಾರೋಹಳ್ಳಿ ಗ್ರಾಮದ ಬಸ್‌ನಿಲ್ದಾಣದ ಹತ್ತಿರ ಹೈಮಾಸ್ಟ್‌ವಿದ್ಯುತ್ ದೀಪದ ಅಳವಡಿಕೆ ಕಾಮಗಾರಿಗಳಿಗೆ ಚಾಲನೆ ನೀಡಿದರು.