ಸಾರಿಗೆ ಅಧಿಕಾರಿಗಳ ಧೋರಣೆ ಖಂಡಿಸಿ ಚಾಲಕರು ಪ್ರತಿಭಟನೆ

PROTEST1
Published on

ಬೆಂಗಳೂರು: ಅನಧಿಕೃತ ರಾಪಿಡೋ, ಓಲಾ, ಉಬರ್​,ಆನ್​ಲೈನ್​ ಸಂಸ್ಥೆಗಳು ವಿರುದ್ಧ ಹಾಗೂ ಕಾನೂನುಬಾಹಿರ ಸಂಸ್ಥೆಗಳಿಗೆ ಪ್ರೋತ್ಸಾಹ ನೀಡುತ್ತಿರುವ ಸಾರಿಗೆ ಅಧಿಕಾರಿಗಳ ಧೋರಣೆ ಖಂಡಿಸಿ ಇಂಡಿಯನ್​ ವೆಹಿಕಲ್​ ಡೆವರ್ಸ್​ ಟ್ರೇಡ್​ ಯೂನಿಯನ್​ ಮತ್ತು ಸ್ನೇಹಜೀವಿ ಚಾಲಕರ ಟ್ರೇಡ್​ ಯೂನಿಯನ್​ ಪ್ರತಿನಿಧಿಗಳು, ಸ್ವಾತಂತ್ರ್ಯ ಉದ್ಯಾನದಲ್ಲಿ ಶನಿವಾರ ಪ್ರತಿಭಟಿಸಿದರು.

ಚಾಲಕರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಖಾಲಿ ಪಾತ್ರೆ, ತಟ್ಟೆ ಹಿಡಿದು ವಿನೂತನವಾಗಿ ಪ್ರತಿಭಟಿಸಿ ಕಪ್ಪು ಪಟ್ಟಿ ಧರಿಸಿ ಘೋಷಣೆ ಕೂಗಿದರು. ಸರ್ಕಾರದಿಂದ ಅನುಮತಿ ಪಡೆಯದೆ ಕಾನೂನುಬಾಹಿರ ಸಾಗಾಣೆ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಇದರಿಂದ ಖಾಸಗಿ ವಾಹನ ಚಾಲಕರ ದುಡಿಮೆಗೆ ಅನ್ಯಾಯವಾಗುತ್ತಿದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ಇಂಡಿಯನ್​ ವೆಹಿಕಲ್​ ಡೆವರ್ಸ್​ ಟ್ರೇಡ್​ ಯೂನಿಯನ್​ ಅಧ್ಯಕ್ಷ ಗಂಡಸಿ ಸದಾನಂದ ಸ್ವಾಮಿ ಮಾತನಾಡಿ, ಸಮಸ್ಯೆ ಬಗೆಹರಿಸುವಂತೆ ನಿರಂತರವಾಗಿ ಮನವಿ ಮಾಡಿದ್ದರೂ ಸಾರಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಕೂಡಲೇ ಸಮಸ್ಯೆ ಬಗೆಹರಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್​ಗೆ ಮನವಿ ಮಾಡಿದ್ದೇವೆ. ಸರ್ಕಾರದ ಧೋರಣೆಯಿಂದ ಚಾಲಕರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ದರ ತಾರತಮ್ಯ ಮಾಡುತ್ತಿರುವ ಓಲಾ, ಉಬರ್​ಗೆ ಕೇಂದ್ರ ಸರ್ಕಾರ ಈಗಾಗಲೇ ನೋಟಿಸ್​ ನೀಡಿ ಸ್ಪಷ್ಟನೆ ಕೇಳಿದೆ. ಚಾಲಕರ ಸಮಸ್ಯೆಗಳಿಗೆ ರಾಜ್ಯ ಸರ್ಕಾರವೂ ಕೂಡ ನೇರ ಹೊಣೆ. ನಮ್ಮ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಸ್ನೇಹಜೀವಿ ಚಾಲಕರ ಟ್ರೇಡ್​ ಯೂನಿಯನ್​ ಅಧ್ಯಕ್ಷ ಸಂತೋಷ್​ ಕುಮಾರ್​ ಮಾತನಾಡಿ, ಕಾನೂನು ಬಾಹಿರ ಸಂಸ್ಥೆಗಳ ವಿರುದ್ಧ ಕ್ರಮಕೈಗೊಳ್ಳಲು ಸರ್ಕಾರ ಉನ್ನತಮಟ್ಟದ ಸಭೆ ಕರೆಯಬೇಕು ಎಂದು ಒತ್ತಾಯಿಸಿದರು. ಪ್ರಧಾನ ಕಾರ್ಯದರ್ಶಿ ರಾಜುಕನ್ನಡಿಗ ಸೇರಿ ನೂರಾರು ಚಾಲಕರು ಭಾಗಿಯಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net