ಮೈಸೂರಿನಲ್ಲಿ ಬರಗಾಲ : ಕುಡಿಯುವ ನೀರಿನ ಸಮಸ್ಯೆ ಆಗದಂತೆ ಎಚ್ಚರ ವಹಿಸಿ

zp meeting
Published on

ಮೈಸೂರು: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೇಶಕ ನಾಗೇಂದ್ರ ಪ್ರಸಾದ್ ಜಿಲ್ಲಾ ಪಂಚಾಯಿತಿಯ ಮಿನಿ ಸಭಾಂಗಣದಲ್ಲಿ ಮಂಗಳವಾರ ಜಲಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿ ದರು.

ಜಲಜೀವನ್ ಮಿಷನ್ ಯೋಜನೆಯಡಿ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ನಿಗದಿಪಡಿಸಿದ ದಿನಾಂಕದೊಳಗೆ ಕಾಮಗಾರಿಯನ್ನು ಗುಣಮಟ್ಟದಲ್ಲಿ ಪೂರ್ಣಗೊಳಿಸಿ ‘ಹರ್ ಘರ್ ಜಲ್’ ಘೋಷಣೆ ಮಾಡಿ ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರಿ ಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಬರಗಾಲ ಎದುರಾಗಿದ್ದು, ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕು. ಮುಂದಿನ 6 ತಿಂಗಳುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬರುವ ಗ್ರಾಮಗಳನ್ನು ಗುರುತಿಸಿ ಕುಡಿಯುವ ನೀರು ಪೂರೈಸುವ ಕುರಿತು ಮುನ್ನೆಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಶೌಚಗೃಹ ರಹಿತ ಕುಟುಂಬಗಳಿಗೆ ಶೌಚಗೃಹ ನಿರ್ಮಸಲು ಅರ್ಜಿ ಸಲ್ಲಿಸುವಂತೆ ಹೆಚ್ಚು ಪ್ರಚಾರ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಘನತ್ಯಾಜ್ಯ ನಿರ್ವಹಣಾ ಘಟಕ, ಮಲಿನ ನೀರು ಸಂಸ್ಕರಣಾ ಘಟಕ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ ಗಾಯತ್ರಿ, ಉಪ ಕಾರ್ಯದರ್ಶಿ (ಅಭಿವೃದ್ಧಿ) ಡಾ.ಕೃಷ್ಣರಾಜು, ಅಧೀಕ್ಷಕ ಇಂಜಿನಿಯರ್ ಕೃಷ್ಣಮೂರ್ತಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ರಂಜಿತ್ ಕುಮಾರ್ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net