ಮಾದಕ ದ್ರವ್ಯಗಳ ನಿರ್ಮೂಲನಾ ಸಮಿತಿ ಸಭೆ, ಅಕ್ರಮ ಮದ್ಯ ತಡೆಗೆ ಕ್ರಮ ವಹಿಸಲು ಡಿಸಿ ಟಿ.ಭೂಬಾಲನ್ ಸೂಚನೆ

DC MEETING ABAKARI ILAKHE
ವಿಜಯಪುರ ನಗರದ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾದಕ ದ್ರವ್ಯಗಳ ನಿರ್ಮೂಲನಾ ಸಮಿತಿ ಸಭೆ ನಡೆಸಿದರು. ಎಸ್‌ಪಿ ಲಕ್ಷ್ಮಣ ನಿಂಬರಗಿ, ಎಎಸ್‌ಪಿ ಶಂಕರ ಮಾರಿಹಾಳ ಮತ್ತಿತರರಿದ್ದಾರೆ.
Published on

ವಿಜಯಪುರ: ಅಕ್ರಮ ಮದ್ಯ ಮಾರಾಟ ತಡೆಗೆ ಕಠಿಣ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಂಬಂಧಿಸಿ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಮಾದಕ ದ್ರವ್ಯಗಳ ನಿರ್ಮೂಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳ್ಳಬಟ್ಟಿ ಸಾರಾಯಿ ಹಾಗೂ ಅಕ್ರಮ ಮದ್ಯ ಮಾರಾಟವಾಗದಂತೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಹಾಗೂ ಸಂಬಂಧಿಸಿದ ಇಲಾಖೆಗಳು ಸಮನ್ವಯ ಸಾಧಿಸಿ ಅಕ್ರಮ ಮದ್ಯ ಮಾರಾಟವಾಗದಂತೆ ನೋಡಿಕೊಳ್ಳಬೇಕು. ಕಳ್ಳಬಟ್ಟಿ ಸಾರಾಯಿ ತಯಾರಿಕೆ ಸ್ಥಳಗಳ ಮೇಲೆ ಅನಿರೀಕ್ಷಿತ ದಾಳಿ ನಡೆಸಬೇಕು ಎಂದು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಾದಕ ದ್ರವ್ಯಗಳ ಸೇವನೆಯಿಂದ ಜನರ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅಗತ್ಯ ತಿಳಿವಳಿಕೆ ಮೂಡಿಸಬೇಕು. ಮಾದಕ ವಸ್ತು-ದ್ರವ್ಯ ಸೇವನೆಗೊಳಗಾದವರಿಗೆ ಜಿಲ್ಲಾ ಆರೋಗ್ಯ ಇಲಾಖೆಯ ಮೂಲಕ ಸೇವನೆಗೊಳಗಾದವರನ್ನು ಪರೀಕ್ಷೆಗೆ ಒಳಪಡಿಸಲು ಕ್ರಮ ವಹಿಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.

ಎಸ್‌ಪಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳು ಔಷಧದ ಮಳಿಗೆಗಳಲ್ಲಿ ಕಡ್ಡಾಯವಾಗಿ ವೈದ್ಯರ ಅನುಮತಿ ಪಡೆದು ಔಷಧ ಮಾರಾಟಕ್ಕೆ ಕ್ರಮ ವಹಿಸಬೇಕು. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅರಿವು ಮೂಡಿಸಬೇಕು. ಮಾದಕ ದ್ರವ್ಯ ಮಾರಾಟ ಹಾಗೂ ಸಂಗ್ರಹಣೆ ಬಗ್ಗೆ ಮಾಹಿತಿ ಇದ್ದಲ್ಲಿ ಕೂಡಲೆ ಸಂಬಂಧಿಸಿದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಸೂಚನೆ ನೀಡಿದರು.

ಕಳೆದ ಮೂರು ವರ್ಷದ ಪ್ರಕರಣಗಳು

ಕಳೆದ ಮೂರು ವರ್ಷಗಳಲ್ಲಿ ಜಿಲ್ಲೆಯಾದ್ಯಂತ ಹಲವು ಕಡೆ ದಾಳಿ ನಡೆಸಿ ಅಕ್ರಮವಾಗಿ ಸಾಗಿಸುತ್ತಿದ್ದ ಮಾದಕ ದ್ರವ್ಯ ವಶಕ್ಕೆ ಪಡೆಯಲಾಗಿದೆ. 2023ರಲ್ಲಿ 29 ಪ್ರಕರಣಗಳನ್ನು ದಾಖಲಿಸಿ, 296 ಕೆಜಿ 403 ಗ್ರಾಂ ಮಾದಕ ದ್ರವ್ಯ ಜಫ್ತು ಮಾಡಲಾಗಿದೆ. 200 ಕೆಜಿ 400 ಗ್ರಾಂ ಗಾಂಜಾ ನಾಶಪಡಿಸಲಾಗಿದೆ.

2024ನೇ ಸಾಲಿನಲ್ಲಿ 28 ಪ್ರಕರಣಗಳನ್ನು ದಾಖಲಿಸಿಕೊಂಡು, 297 ಕೆಜಿ 872 ಗ್ರಾಂ ಗಾಂಜಾ ಜಫ್ತು ಮಾಡಿದ್ದು 373 ಕೆಜಿ 574ಗ್ರಾಂ ಗಾಂಜಾ ನಾಶಪಡಿಸಲಾಗಿದೆ. 2025ರಲ್ಲಿ 15 ಪ್ರಕರಣಗಳನ್ನು ದಾಖಲಿಸಿ 239ಕೆಜಿ 862 ಗ್ರಾಂ ಗಾಂಜಾ ಜಫ್ತು ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ 283 ಕೆಜಿ 808 ಗ್ರಾಂ ಗಾಂಜಾ ಹಾಗೂ 18 ಕೆಜಿ 432 ಗ್ರಾಂ ಅಫೀಮು ವಶಪಡಿಸಿಕೊಂಡು ನಾಶ ಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಎಎಸ್‌ಪಿ ಶಂಕರ ಮಾರಿಹಾಳ, ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಇಂಡಿ ಉಪ ವಿಭಾಗಾಧಿಕಾರಿ ಅನುರಾಧ ವಸ್ತ್ರದ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸಿಂ ಬಾಬಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಂಪತ್ ಗುಣಾರಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ, ಪೀಟರ್ ಅಲೆಕ್ಸಾಂಡರ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net