

ಮಂಗಳೂರು: ಕಾರಿನಲ್ಲಿ ಸಂಗ್ರಹಿಸಿಟ್ಟುಕೊಂಡು ಮಂಗಳೂರು ನಗರ ಹಾಗೂ ಕೇರಳ ರಾಜ್ಯದಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಕುಖ್ಯಾತ ಆರೋಪಿಯನ್ನು ಮಂಗಳೂರು ಅಪರಾಧ ಪತ್ತೆ ದಳ (ಸಿಸಿಬಿ) ಪೊಲೀಸರು ಬಂಧಿಸಿ, 3,65,500 ರೂ. ಮೌಲ್ಯದ ಸೊತ್ತು ವಶಪಡಿಸಿಕೊಂಡಿದ್ದಾರೆ.
ವಿಟ್ಲ ರಿಯಾ ಪ್ಲಾೃನೆಟ್ ವಸತಿ ಸಮುಚ್ಛಯದ 102 ನಂಬ್ರದ ಮನೆಯಲ್ಲಿ ವಾಸವಿದ್ದ ಹಸನ್ ಸಾದಿಕ್ ಯಾನೆ ಬ್ಲೇಡ್ ಸಾದಿಕ್ (35) ಬಂಧಿತ.
ಆತನ ವಶದಿಂದ ಒಟ್ಟು 50 ಗ್ರಾಂ ತೂಕದ 2,50,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮಾರುತಿ 800 ಕಾರು, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 3,65,500 ಆಗಬಹುದು. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಮಾದಕ ವಸ್ತು ಮಾರಾಟ ಜಾಲದ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ.
ಆರೋಪಿ ಹಸನ್ ಸಾದಿಕ್ ಬ್ಲೇಡ್ ಸಾದಿಕ್ ಎಂಬಾತನ ವಿರುದ್ಧ ಈ ಹಿಂದೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಒಟ್ಟು 8 ಹಲ್ಲೆ, ಬೆದರಿಕೆ ಪ್ರಕರಣಗಳು, 4 ಕೊಲೆ ಯತ್ನ ಪ್ರಕರಣ, ಪುತ್ತೂರು ನಗರ ಠಾಣೆಯಲ್ಲಿ 2 ಕೊಲೆ ಯತ್ನ ಪ್ರಕರಣ,ಉಪ್ಪಿನಂಗಡಿ ಠಾಣೆಯಲ್ಲಿ ಮಾನಭಂಗ ಹಾಗೂ ಕಿಡ್ನಾಫ್ ಪ್ರಕರಣ, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಹಲ್ಲೆ ಪ್ರಕರಣ, ಕಾವೂರು ಪೊಲೀಸ್ ಠಾಣೆಯಲ್ಲಿ ದರೋಡೆಗೆ ಯತ್ನ ಪ್ರಕರಣ, ಬೆಂಗಳೂರು ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟ ಹೀಗೆ ಒಟ್ಟು 17 ಪ್ರಕರಣಗಳು ದಾಖಲಾಗಿದ್ದು, ಈತನು ಸುಮಾರು 6 ತಿಂಗಳಿನಿಂದ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದು, ಈತನ ವಿರುಧ್ದ ನ್ಯಾಯಾಲಯವು ವಾರಂಟ್ ಹೊರಡಿಸಲಾಗಿರುತ್ತದೆ.
ಆರೋಪಿ ಮತ್ತು ಮಾದಕ ವಸ್ತು ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ.ಎ. ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್.ಎಂ, ಪಿಎಸ್‌ಐಯವರಾದ ರಾಜೇಂದ್ರ ಬಿ, ನರೇಂದ್ರ, ಶರಣಪ್ಪ ಭಂಡಾರಿ, ಸುದೀಪ್ ಎಂ.ವಿ. ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.