ರಾಜ್ಯ ಸರ್ಕಾರದ ವಿರುದ್ಧ ದಸಂಸ ಪ್ರತಿಭಟನೆ: ದಲಿತರ ಹಣ ಗ್ಯಾರಂಟಿ ಯೋಜನೆಗೆ ಬಳಕೆ ಆರೋಪ

Dss Protest Mandya
Published on

ಮಂಡ್ಯ: ದಲಿತರ ಅಭ್ಯುದಯಕ್ಕಾಗಿ ಮೀಸಲಿಟ್ಟ ಹಣದಲ್ಲಿ 14,262 ಕೋಟಿ ರೂ.ಗಳನ್ನು ರಾಜ್ಯಸರ್ಕಾರ ಗ್ಯಾರಂಟಿ ಯೋಜನೆಗೆ ಬಳಸಲು ಹೊರಟಿದೆ ಎಂದು ಆರೋಪಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಕಾರ್ಯಕರ್ತರು, ರಾಜ್ಯಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಪರಿಶಿಷ್ಟ ಪಂಗಡದ ವಾಲ್ಮೀಕಿ ನಿಗಮದಲ್ಲಿ ಸುಮಾರು 187 ಕೋಟಿ ರೂ ಅವ್ಯವಹಾರದಲ್ಲಿ ಭಾಗಿಯಾಗಿರುವವರನ್ನು ಶಿಕ್ಷೆಗೆ ಗುರಿಪಡಿಸಬೇಕು. ಈ ಪ್ರಕರಣದಲ್ಲಿ ಶಾಮೀಲಾಗಿರುವ ಶಾಸಕರು ಹಾಗೂ ಮಂತ್ರಿಗಳನ್ನು ಶಾಸಕತ್ವದಿಂದ ವಜಾಗೊಳಿಸಿ ಮತ್ತೆ ಚುನಾವಣೆಗೆ ಸ್ಪರ್ಧಿಸದಂತೆ ಕಾನೂನು ರೂಪಿಸಬೇಕೆಂದು ಆಗ್ರಹಿಸಿದರು.

ರಾಜ್ಯಪಾಲರು ಮಧ್ಯಪ್ರವೇಶಿಸಿ ಗ್ಯಾರಂಟಿ ಯೋಜನೆಗಳಿಗೆ ಪ.ಜಾತಿ/ ಪ.ವರ್ಗಗಳ ಅಭ್ಯುದಯಕ್ಕೆ ಮೀಸಲಿಟ್ಟಿರುವ ಅನುದಾನವನ್ನು ಬಳಕೆ ಮಾಡಿ ದಲಿತರ ಹಣವನ್ನು ಲೂಟಿ ಹಾಗೂ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ಉಲ್ಲಂಘನೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ದಸಂಸ ಮುಖಂಡ ಸೋಮನಹಳ್ಳಿ ಅಂದಾನಿ, ಶಿವು, ಜಿ.ಎಂ.ಸತ್ಯ, ಬಸವರಾಜು, ಮೂರ್ತಿ, ಅಂಕಯ್ಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net