ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಆಗ್ರಹಿಸಿ ಡಿಎಸ್‌ಎಸ್ ಪ್ರತಿಭಟನೆ

31sgr2
ಸಾಗರದಲ್ಲಿ ಡಿಎಸ್‌ಎಸ್ ಸದಸ್ಯರು ಉಪವಿಭಾಗಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ಎಂ.ಗುರುಮೂರ್ತಿ, ನಾಗರಾಜ್, ಎಂ.ಏಳುಕೋಟಿ, ಲ್.ಚಂದ್ರಪ್ಪ, ಎಚ್.ಡಿ.ಮಂಜುಳಾ ಇತರರಿದ್ದರು.
Published on

ಸಾಗರ: ಮಣಿಪುರದಲ್ಲಿ ಮಹಿಳೆಯರ ಮೇಲೆ ನಡೆದಿರುವ ದೌರ್ಜನ್ಯ ಖಂಡಿಸಿ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ಸದಸ್ಯರು ಸೋಮವಾರ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಸಮಿತಿಯ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಮಾತನಾಡಿ, ಮಣಿಪುರದಲ್ಲಿ ಮಹಿಳೆಯರ ಮೇಲೆ ನಡೆದಿರುವ ದೌರ್ಜನ್ಯದಿಂದ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ. ಮಾನವ ಹಕ್ಕು ಉಲ್ಲಂಘನೆಯಾಗಿದ್ದರೂ ರಾಜ್ಯ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ಗಂಭೀರ ಕ್ರಮಕೈಗೊಳ್ಳದಿರುವುದು ಖಂಡನೀಯ. ಸುಪ್ರೀಂಕೋರ್ಟ್ ಎಚ್ಚರಿಕೆ ನಂತರ ಕೇಂದ್ರ ಸರ್ಕಾರ ಸಿಬಿಐ ತನಿಖೆ ನಾಟಕ ಆಡುತ್ತಿದೆ ಎಂದು ದೂರಿದರು.
ಮಣಿಪುರ ಸಿಎಂ ಬೀರೇನ್ ಸಿಂಗ್ ಸರ್ಕಾರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಲವಾಗಿದೆ. ತಕ್ಷಣ ಬೀರೇನ್ ಸಿಂಗ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಮಣಿಪುರ ಹಿಂಸೆ ನಿಯಂತ್ರಿಸುವಲ್ಲಿ ವಿಲವಾಗಿರುವ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ರಾಷ್ಟ್ರಪತಿಗಳು ಮಧ್ಯಪ್ರವೇಶ ಮಾಡಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಸಮಿತಿಯ ತಾಲೂಕು ಸಂಚಾಲಕ ನಾಗರಾಜ್ ಮಾತನಾಡಿ, ಕುಕಿ ಬುಡಕಟ್ಟು ಸಮುದಾಯದ ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿರುವ ದುಷ್ಕರ್ಮಿಗಳನ್ನು ಸುಮ್ಮನೆ ಬಿಡಬಾರದು. ಮಣಿಪುರ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
ಸಮಿತಿ ಜಿಲ್ಲಾ ಸಂಚಾಲಕ ಎಂ.ಏಳುಕೋಟಿ, ಪ್ರಮುಖರಾದ ಎಲ್.ಚಂದ್ರಪ್ಪ, ಎಚ್.ಡಿ.ಮಂಜುಳಾ, ಶಿವಪ್ಪ, ರಂಗಪ್ಪ ಹೊನ್ನೆಸರ, ನಾರಾಯಣ ಅರಮನೆಕೇರಿ, ಸತೀಶ ಕುಮಾರ್, ಶಂಕರ್, ಈಶ್ವರ, ರಾಮಣ್ಣ ಹಸಲರು, ಮೋಹಿನಿ, ನಾಗರತ್ನ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net