

ಮೈಸೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾ.1 ರಿಂದ 22ರವರೆಗೆ ನಡೆಯಲಿದ್ದು, ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮೈಸೂರು ನಗರದ 26 ಹಾಗೂ ಗ್ರಾಮಾಂತರ ವ್ಯಾಪ್ತಿಯ 23 ಸೇರಿದಂತೆ ಒಟ್ಟು 49 ಪರೀಕ್ಷಾ ಕೇಂದ್ರಗಳಲ್ಲಿ 31,628 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಪರೀಕ್ಷಾ ಅಕ್ರಮಗಳ ತಡೆಗೆ ಕ್ರಮ ವಹಿಸಲಾಗಿದೆ. ತಾಲೂಕು ಮತ್ತು ಜಿಲ್ಲಾ ಮಟ್ಟದ ವಿಶೇಷ ಜಾಗೃತ ದಳ ರಚಿಸಲಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಲಿದೆ.
ಪರೀಕ್ಷಾ ಕೊಠಡಿಯೊಳಗೆ ಮೊಬೈಲ್ ಮತ್ತು ಇತರ ಶ್ರವಣ ಸಾಧನಗಳನ್ನು ತರುವುದನ್ನು ನಿಷೇಧಿಸಲಾಗಿದೆ. ಪ್ರಶ್ನೆಪತ್ರಿಕೆಗಳ ಸೋರಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗಿದೆ. ಜಿಲ್ಲಾ ಖಜಾನೆಗಳಲ್ಲಿ ಪ್ರಶ್ನೆ ಪತ್ರಿಕೆ ಇರಿಸಿದ ಕೊಠಡಿಗಳ ಸುತ್ತ ಸಿಸಿ ಕ್ಯಾಮರಾ ಕಣ್ಗಾವಲು ಇಡಲಾಗಿದೆ. ಪ್ರತಿಯೊಬ್ಬರ ಚಲನವಲನದ ಮೇಲೂ ನಿಗಾ ಇಡಲಾಗುತ್ತದೆ. ಪ್ರಶ್ನೆ ಪತ್ರಿಕೆ ಕೊಠಡಿಗೆ ಹೋಗುವವರ ವಿಡಿಯೋ ರೆಕಾರ್ಡ್ ಮಾಡಲಾಗುತ್ತದೆ.
ನಿಷೇಧಾಜ್ಞೆ ಜಾರಿ: ಪರೀಕ್ಷೆಗಳು ನಡೆಯಲಿರುವ ಕೇಂದ್ರಗಳ 200 ಮೀಟರ್ ವ್ಯಾಪ್ತಿ ಪ್ರದೇಶದ ಸುತ್ತಲೂ ಕಲಂ 144 ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಪ್ರದೇಶಗಳಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷಾ ಸಿಬ್ಬಂದಿ ಹೊರತುಪಡಿಸಿ ಅನಧಿಕೃತ ವ್ಯಕ್ತಿಗಳು ಸಂಚರಿಸುವಂತಿಲ್ಲ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ.