ಶಿಕ್ಷಣ ಪಡೆಯುವುದು ಮಕ್ಕಳ ಹಕ್ಕು

26M.D.R.1
Published on

ಮದ್ದೂರು: ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಾರ್ವಜನಿಕರ ಸಹಕಾರ ಅಗತ್ಯ ಎಂದು 2ನೇ ಅಪರ ಸಿವಿಲ್ ನ್ಯಾಯಾಧೀಶ ಎನ್.ವಿ.ಕೋನಪ್ಪ ತಿಳಿಸಿದರು.


ಪಟ್ಟಣದ ಜವಾಹರ್ ಪ್ರೌಢಶಾಲೆಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಕಾರ್ಮಿಕ ಇಲಾಖೆಯಿಂದ ಮಂಗಳವಾರ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳು ಬಾಲ್ಯವನ್ನು ಆಟ, ಪಾಠ ಹಾಗೂ ಶಿಕ್ಷಣದೊಂದಿಗೆ ಕಳೆಯಬೇಕು. ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡಿ ದೇಶದ ಉತ್ತಮ ಪ್ರಜೆಗಳನ್ನಾಗಿ ರೂಪಿಸಬೇಕು. ಶಿಕ್ಷಣ ಪಡೆಯುವುದು ಮಕ್ಕಳ ಹಕ್ಕಾಗಿದೆ ಎಂದು ಹೇಳಿದರು.


ಮಕ್ಕಳನ್ನು ಗ್ಯಾರೇಜ್, ಹೋಟೆಲ್ ಸೇರಿದಂತೆ ಇನ್ನಿತರ ಕಡೆಗಳಲ್ಲಿ ದುಡಿಸಿಕೊಳ್ಳುವುದು ಕಾನೂನಿನ ಪ್ರಕಾರ ಅಪರಾಧ. ಮಕ್ಕಳನ್ನು ದುಡಿಸಿಕೊಳ್ಳುವುದು ಕಂಡ ಬಂದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.


ಕಾರ್ಮಿಕ ನಿರೀಕ್ಷಕ ಕೃಷ್ಣಪ್ಪ ಮಾತನಾಡಿ, ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಬಾಲ ಕಾರ್ಮಿಕರಿಂದ ದುಡಿಸಿಕೊಳ್ಳದಂತೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು ಜನರಿಗೆ ಅರಿವು ಮೂಡಿಸಲಾಗುತ್ತಿದೆ. ಒಂದು ವೇಳೆ ಬಾಲ ಕಾರ್ಮಿಕರನ್ನು ದುಡಿಸಿಕೊಂಡರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.


ಕಾನೂನು ಸಲಹೆಗಾರ, ವಕೀಲ ಎಂ.ಮಹೇಶ್ ಉಪನ್ಯಾಸ ನೀಡಿದರು. 3ನೇ ಅಪರ ಸಿವಿಲ್ ನ್ಯಾಯಾಧೀಶ ಎಸ್.ಪಿ.ಕಿರಣ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಎನ್‌ಎಚ್‌ಸಿವಿಎನ್ ಕಾರ್ಯದರ್ಶಿ ಸಿ.ಅಪೂರ್ವಚಂದ್ರು, ವಕೀಲರ ಸಂಘದ ಅಧ್ಯಕ್ಷ ಎಂ.ಎನ್.ಶಿವಣ್ಣ, ಮುಖ್ಯ ಶಿಕ್ಷಕಿ ಎಚ್.ಎಂ.ಅನಿತಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net