

ವಿಜಯವಾಣಿ ಸುದ್ದಿಜಾಲ ಉಡುಪಿ
ಪ್ರಸಕ್ತ ಶೈಕ್ಷಣಿಕ ವರ್ಷ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ರಾಜ್ಯಾದ್ಯಂತ ಎಲ್ಲ ಸರ್ಕಾರಿ ಶಾಲೆ ಆರಂಭಕ್ಕೆ ಸಕಲ ಸಿದ್ಧತೆ ನಡೆದಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಉಡುಪಿಯ ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸೋಮವಾರ ಆಯೋಜಿಸಿದ್ದ ವಿಧಾನ ಪರಿಷತ್ ಚುನಾವಣಾ ಪೂರ್ವಭಾವಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಲ್ಲ ಶಾಲೆಗಳಿಗೂ ಸಕಾಲಕ್ಕೆ ಪುಸ್ತಕ, ಸಮವಸ್ತ್ರ ವಿತರಿಸಲಾಗುವುದು ಎಂದರು.
ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ರಾಜ್ಯದಲ್ಲಿ 500 ಶಾಲೆಗಳನ್ನು ಮೇಲ್ದರ್ಜೆಗೆ ಏರಿಸಿ, ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಆಗಿ ಪರಿವರ್ತಿಸಲಾಗುತ್ತಿದೆ. ಇದಕ್ಕಾಗಿ ಸಿಎಸ್ಆರ್ ಫಂಡ್ ಸಂಗ್ರಹಿಸಲಾಗುತ್ತಿದ್ದು, ಅದರ ಜವಾಬ್ದಾರಿಯನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿಭಾಯಿಸಲಿದ್ದಾರೆ. ಮುಂದಿನ 3 ವರ್ಷದಲ್ಲಿ ರಾಜ್ಯದಲ್ಲಿ ಮತ್ತೆ 3 ಸಾವಿರ ಕೆಪಿಎಸ್ ಶಾಲೆಗಳನ್ನು ಆರಂಭಿಸಲಾಗುವುದು ಎಂದರು.
ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶೇ.20 ಕೃಪಾಂಕ ನೀಡಲಾಗಿತ್ತು. ಇದು ಈ ವರ್ಷಕ್ಕಷ್ಟೇ ಸೀಮಿತವಾಗಿದೆ. ಮುಂದೆ ನಡೆಯಲಿರುವ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ-2 ಹಾಗೂ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ-3 ಇವುಗಳಿಗೆ ಶೇ.20 ಕೃಪಾಂಕ ಇರುವುದಿಲ್ಲ ಎಂದು ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಅಶೋಕ್ಕುಮಾರ್ ಕೊಡವೂರು, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಕೆಪಿಸಿಸಿ ಉಪಾಧ್ಯಕ್ಷ ಎಂ.ಎ. ಗಫೂರ್, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯೆ ಮಮತಾ ಗಟ್ಟಿ, ಎಂಪಿ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ, ಜಿಲ್ಲಾ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೆ., ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪಿ.ಎಂ. ಶಾಹಿದ್, ಪಿ.ಎಂ. ಮಹಮದ್, ವೆರೋನಿಕಾ ಕರ್ನೆಲಿಯೋ, ಆಯನೂರು ಮಂಜುನಾಥ, ಕೆ.ಕೆ. ಮಂಜುನಾಥ, ಪ್ರಸಾದ್ರಾಜ್ ಕಾಂಚನ್, ರಮೇಶ್ ಕಾಂಚನ್, ಭಾಸ್ಕರ್ ರಾವ್ ಕಿದಿಯೂರು ಇತರರಿದ್ದರು.
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನ ಪರಿಷತ್ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಎಲ್ಲ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಪಕ್ಷದ ಶಾಸಕ-ಸಚಿವರಿಗೆ ಹಾಗೂ ಬೂತ್ ಮಟ್ಟದವರೆಗಿನ ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ. ನೈರುತ್ಯ ಶಿಕ್ಷಣ ಹಾಗೂ ಪದವೀಧರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೇ 'ಗ್ಯಾರಂಟಿ' ಗೆಲುವಾಗಲಿದೆ. ಕಳೆದ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲ ಭರವಸೆ ಈಡೇರಿಸಿದ್ದೇವೆ. ಈ ಎಂಎಲ್ಸಿ ಚುನಾವಣೆಯಲ್ಲಿ ನೀಡಿರುವ ಎಲ್ಲ ಭರವಸೆಯನ್ನೂ ಈಡೇರಿಸಲಿದ್ದೇವೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲುವುದರಲ್ಲಿ ಅನುಮಾನವಿಲ್ಲ. ಉಡುಪಿ&ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಹಾಗೂ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಗೀತಾ ಶಿವರಾಜ್ಕುಮಾರ್ ಗೆಲುವು ಸಾಧಿಸಲಿದ್ದಾರೆ. ಇದೇ ಅಭಿಪ್ರಾಯದ ರಿಪೋರ್ಟ್ ನಮಗೆ ಲಭಿಸಿದೆ. ಮಧು ಬಂಗಾರಪ್ಪ. ಶಿಕ್ಷಣ ಸಚಿವ