

ಪಾಂಡವಪುರ: ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟ ಮುಂದಿನ ದಿನಗಳಲ್ಲಿ ಮತ್ತಷ್ಟು ಬಲವಾಗಿ ಅಭಿವೃದ್ಧಿ ಪರ, ಜನಪರ ಪರಿಣಾಮಕಾರಿ ಕೆಲಸ ಮಾಡಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಇಂದ್ರೇಶ್ ಹೇಳಿದರು.
ಪಾಂಡವಪುರ ಪುರಸಭೆ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ಎಲ್.ಅಶೋಕ್ ಅವರನ್ನು ಮಂಗಳವಾರ ಅಭಿನಂದಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ಏರ್ಪಟ್ಟ ಬಳಿಕ ನಡೆದ ಲೋಕಸಭೆ ಮತ್ತು ಇತರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಮೈತ್ರಿಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಮೊನ್ನೆ ನಡೆದ ಮಂಡ್ಯ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಮೈತ್ರಿಗೆ ಜಯ ಸಿಕ್ಕಿದೆ. ಪಾಂಡವಪುರದಲ್ಲೂ ಇದು ಮುಂದುವರಿದಿದೆ. ಜಿಲ್ಲೆಯಲ್ಲಿ ಉಭಯ ಪಕ್ಷಗಳ ಕಾರ್ಯಕರ್ತರ ಒಗ್ಗಟ್ಟಿನ ಪ್ರದರ್ಶನವಾಗುತ್ತಿದ್ದು, ಎರಡೂ ಪಕ್ಷಗಳ ಕಾರ್ಯಕರ್ತರು ಒಂದೇ ತಾಯಿಯ ಮಕ್ಕಳು ಎಂಬಂತೆ ಅಧಿಕಾರವನ್ನು ಸಮಾನವಾಗಿ ಹಂಚಲಾಗುತ್ತಿದೆ. ಇದಕ್ಕಾಗಿ ಬಿಜಿಪಿ ಮತ್ತು ಜೆಡಿಎಸ್ ಪಕ್ಷದ ನಾಯಕರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.
ಸಿಎಂ ರಾಜೀನಾಮೆ ನೀಡಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲ ಎನ್ನುತ್ತಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷದಲ್ಲಿಯೇ ಹಲವಾರು ಹಗರಣಗಳು ಬಯಲಿಗೆ ಬಂದಿವೆ. ಈ ಮೂಲಕ ಕಾಂಗ್ರೆಸ್ ನಾಯಕರು ರಾಜ್ಯದ ಜನರ ವಿಶ್ವಾಸ ಕಳೆದುಕೊಂಡಿದ್ದಾರೆ. ದುರಾಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಒಗ್ಗೂಡಿ ನಿರಂತರ ಹೋರಾಟ ನಡೆಸಲಿದ್ದಾರೆ ಎಂದರು.
ಪುರಸಭೆ ಉಪಾಧ್ಯಕ್ಷ ಎಲ್.ಅಶೋಕ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಕೆ.ಎಲ್.ಆನಂದ್, ತಾಲೂಕು ಅಧ್ಯಕ್ಷ ಧನಂಜಯ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಂಗಳಾ ನವೀನ್‌ಕುಮಾರ್, ಮೈಶುಗರ್ ಮಾಜಿ ಅಧ್ಯಕ್ಷ ಜೆ.ಶಿವಲಿಂಗೇಗೌಡ, ಮುಖಂಡರಾದ ಎಸ್‌ಎನ್‌ಟಿ ಸೋಮಶೇಖರ್, ಚಿಕ್ಕಮರಳಿ ನವೀನ್, ಶ್ರೀನಿವಾಸ್‌ನಾಯಕ, ಡೇರಿ ರಾಮು ಇತರರು ಇದ್ದರು.