

ಯಳಂದೂರು: ಪಟ್ಟಣದಲ್ಲಿ ಬಹುದಿನಗಳಿಂದ ಶಿಕ್ಷಕರ ಬೇಡಿಕೆಯಾಗಿದ್ದ ಶಿಕ್ಷಕರ ಭವನಕ್ಕೆ ಈಗಾಗಲೇ ಪಟ್ಟಣ ಪಂಚಾಯಿತಿಯಿಂದ ಜಾಗ ಗುರುತಿಸಲಾಗಿದ್ದು, ಶೀಘ್ರ ಭೂಮಿಪೂಜೆ ನೆರವೇರಿಸಲಾಗುವುದು ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಭರವಸೆ ನೀಡಿದರು.
ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ 7ನೇ ವೇತನ ಆಯೋಗವನ್ನು ಜಾರಿಗೆ ತಂದಿರುವುದು ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ. ಇದಕ್ಕೆ ಸರ್ಕಾರಕ್ಕೆ ನಾವು ಕೃತಜ್ಞತೆ ಸಲ್ಲಿಸಬೇಕು. ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಲ್ಲಿ ಕಳೆದ ಬಾರಿಗಿಂತ ಯಳಂದೂರು ತಾಲೂಕು 4 ನೇ ಸ್ಥಾನಕ್ಕೆ ಕುಸಿದಿದೆ. ಜಿಲ್ಲೆಯೂ ಕೂಡ 21ನೇ ಸ್ಥಾನಕ್ಕೆ ಕುಸಿದಿದ್ದು ಈ ಬಾರಿ ಶಿಕ್ಷಕರು ಈ ಬಗ್ಗೆ ಹೆಚ್ಚಿನ ನಿಗಾವಹಿಸಬೇಕು. ತಾಲೂಕನ್ನು ಮೊದಲ ಸ್ಥಾನಕ್ಕೆ ಕೊಂಡೊಯ್ಯಲು ಯತ್ನಿಸಬೇಕು. ಜಿಲ್ಲೆಯ ಫಲಿತಾಂಶವನ್ನು ಸುಧಾರಿಸಲು ಶ್ರಮ ವಹಿಸಬೇಕು ಎಂದು ಸಲಹೆ ನೀಡಿದರು.
ಅಕ್ಕ ಐಎಎಸ್ ಅಕಾಡೆಮಿಯ ಮುಖ್ಯಸ್ಥ ಡಾ.ಶಿವಕುಮಾರ್ ಮಾತನಾಡಿ, ಪ್ರಾಥಮಿಕ ಶಿಕ್ಷಣ ಪದ್ಧತಿ ತುಂಬ ದುರ್ಬಲವಾಗಿದೆ. ಇದು ಶಿಕ್ಷಣದ ಅಡಿಪಾಯವಾಗಿದ್ದು ಇದನ್ನು ಸರ್ಕಾರಗಳು ಬಲಿಷ್ಠಗೊಳಿಸುವ ಕೆಲಸಕ್ಕೆ ನಾವು ಒತ್ತಡ ಹೇರಬೇಕಿದೆ. ಸರ್ಕಾರಿ ಶಾಲೆ ಮತ್ತು ಆಸ್ಪತ್ರೆಗಳು ಉನ್ನತವಾದ ಶಿಕ್ಷಣ, ಆರೋಗ್ಯ ಸೇವೆ ನೀಡುವಂತಾಗಬೇಕು ಎಂದರು.
ನಿವೃತ್ತಿ ಹೊಂದಿದ ಶಿಕ್ಷಕರು ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ಶಿಕ್ಷಕರ ಮಕ್ಕಳನ್ನು ಸನ್ಮಾನಿಸಲಾಯಿತು. ಪಪಂ ಅಧ್ಯಕ್ಷೆ ಲಕ್ಷ್ಮೀ ಮಲ್ಲು, ನಾಮನಿರ್ದೇಶನ ಸದಸ್ಯ ಲಿಂಗರಾಜಮೂರ್ತಿ, ಬಿಇಒ ಮಾರಯ್ಯ, ಬಿಆರ್‌ಸಿ ನಂಜುಂಡಯ್ಯ, ಮುಖ್ಯಾಧಿಕಾರಿ ಎಂ.ಪಿ. ಮಹೇಶ್‌ಕುಮಾರ್ ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವೀರಭದ್ರಸ್ವಾಮಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೈ.ಎಂ.ಮಂಜುನಾಥ್, ಶಿಕ್ಷಕರ ಸಂಘದ ಅಧ್ಯಕ್ಷ ಸೋಮಣ್ಣ, ದೈಹಿಕ ಶಿಕ್ಷಣ ಪರಿವೀಕ್ಷಕ ಶಾಂತರಾಜು, ತಾಲೂಕಿನ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ ಮುಖ್ಯ ಶಿಕ್ಷಕರು, ಶಿಕ್ಷಕರು ಹಾಜರಿದ್ದರು.