

ಕೆ.ಆರ್.ಪೇಟೆ: ಮಂಡ್ಯ ಲೋಕಸಭಾ ವ್ಯಾಪ್ತಿಯ ಎಲ್ಲ ತಾಲೂಕುಗಳನ್ನು ಹಂತ ಹಂತವಾಗಿ ಅಭಿವೃದ್ಧಿಗೊಳಿಸಲು ಪ್ರತ್ಯೇಕ ಪ್ರಣಾಳಿಕೆಯನ್ನು ರಚಿಸಲಾಗಿದ್ದು, ಚುನಾವಣೆ ಮುಗಿದ ನಂತರ ಅವುಗಳನ್ನು ಅನುಷ್ಠಾನಕ್ಕೆ ತರಲು ರಾಜ್ಯ ಸರ್ಕಾರ ಶ್ರಮಿಸಲಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಮಿತ್ರ ಫೌಂಡೇಷನ್ ಅಧ್ಯಕ್ಷ ವಿಜಯ್ ರಾಮೇಗೌಡ ತಿಳಿಸಿದರು.
ಮಂಡ್ಯ ಹಿಂದಿನಿಂದಲೂ ಬುದ್ಧಿವಂತರನ್ನು ಗೆಲ್ಲಿಸಿ ಕಳುಹಿಸಿರುವ ಜಿಲ್ಲೆಯಾಗಿದ್ದು, ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್‌ಚಂದ್ರು ಅವರನ್ನು ಬಹುಮತದಿಂದ ಗೆಲ್ಲಿಸಬೇಕು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.
ರಾಜ್ಯ ಸರ್ಕಾರ ಐದು ಗ್ಯಾರಂಟಿಗಳನ್ನು ನೀಡುವ ಮೂಲಕ ಜಿಲ್ಲೆಯ ಜನರ ಕುಟುಂಬಗಳಿಗೆ ನೆರವು ನೀಡಿದೆ. ಅಲ್ಲದೇ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ಸಿಎಂ, ಡಿಸಿಎಂ ಅವರೊಂದಿಗೆ ಚರ್ಚಿಸಿ ಜಿಲ್ಲೆಗೆ ಪ್ರತ್ಯೇಕ ಪ್ಯಾಕೇಜ್ ನೀಡಲು ಮುಂದಾಗಿದ್ದಾರೆ. ಜಿಲ್ಲೆಯ ಅಭಿವೃದ್ಧಿಗಾಗಿ ಸಾಫ್ಟ್‌ವೇರ್ ಪಾರ್ಕ್ ನಿರ್ಮಾಣ, ಕೃಷಿ ವಿವಿ ಸ್ಥಾಪನೆ, ಮೆಡಿಕಲ್ ಕಾಲೇಜು ಉನ್ನತೀಕರಣ, ಹೊಸ ಸಕ್ಕರೆ ಕಾರ್ಖಾನೆ ನಿರ್ಮಾಣ, 10 ಸಾವಿರ ಮನೆ ನಿರ್ಮಾಣ, ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ, 20 ಸಾವಿರ ಉದ್ಯೋಗ ಸೃಷ್ಟಿಗೆ ಜವಳಿ ಪಾರ್ಕ್ ಸ್ಥಾಪನೆ ಮಾಡಲಾಗುತ್ತಿದೆ ಎಂದರು.
ಪುರಸಭಾ ಸದಸ್ಯ ಡಿ.ಪ್ರೇಮ್‌ಕುಮಾರ್, ಕೆ.ಸಿ.ಮಂಜುನಾಥ್, ತಾಪಂ ಮಾಜಿ ಸದಸ್ಯ ಮಾಧವಪ್ರಸಾದ್, ಪಿ.ಎಲ್.ಡಿ.ಬ್ಯಾಂಕ್ ಮಾಜಿ ಅಧ್ಯಕ್ಷ ಗೋವಿಂದರಾಜು, ಸಾಸಲು ಈರಪ್ಪ, ವಿಜಯ್, ನಾಟನಹಳ್ಳಿ ಅನಿಲ್, ಚೌಡೇನಹಳ್ಳಿರಘು, ವಿಜಯ್ ರಾಮೇಗೌಡರ ಆಪ್ತಸಹಾಯಕ ಬಸವರಾಜು ಇದ್ದರು.