100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣಕ್ಕೆ ಪ್ರಯತ್ನ

H.D.KOTE-Cong-Anil chikkamadu-MLA (3)
Published on

ಸರಗೂರು : ತಾಲೂಕಿನಲ್ಲಿ ಮುಂದಿನ ದಿನಗಳಲ್ಲಿ 100 ಹಾಸಿಗೆ ಸಾಮರ್ಥ್ಯದ ಸಾರ್ವಜನಿಕ ಆಸ್ಪತ್ರೆ ಮತ್ತು ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ನಿರ್ಮಾಣ ಮಾಡಲು ಪ್ರಯತ್ನಿಸಲಾಗುವುದು ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು.


ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನೂತನ ಡಯಾಲಿಸಿಸ್ ಕೇಂದ್ರವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿ, 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗೆ ತಾಲೂಕು ಮಟ್ಟದ ಅಧಿಕಾರಿಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ನಮ್ಮ ಸರ್ಕಾರ ಇದೆ. ಅಧಿಕಾರಿಗಳು ಕೈ ಜೋಡಿಸಿದರೆ ಮಾತ್ರ ತಾಲೂಕು ಅಭಿವೃದ್ಧಿ ಸಾಧ್ಯ. ಆಸ್ಪತ್ರೆಗೆ ಹೆಚ್ಚಿನ ವೈದ್ಯರು ನೇಮಕ ಮಾಡಿ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.


ಗ್ರಾಮೀಣ ಭಾಗದ ಬಡಜನರಿಗೆ ಅನುಕೂಲವಾಗುವಂತೆ ಆರೋಗ್ಯ ಸಿಬ್ಬಂದಿ ಕೆಲಸ ಮಾಡಬೇಕು. ಜನರಿಗೆ ಹೆಚ್ಚಿನ ರೀತಿಯಲ್ಲಿ ಆರೋಗ್ಯ ಸೌಲಭ್ಯ ಸಿಗುವಂತೆ ನೋಡಿಕೊಳ್ಳಬೇಕು. ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಾತ್ರಿ ಕರ್ತವ್ಯ ನಿರ್ವಹಿಸಲು ವೈದ್ಯಾಧಿಕಾರಿಗಳನ್ನು ನೇಮಿಸುವಂತೆ ತಿಳಿಸಿದ್ದೇನೆ ಎಂದರು.


ಡಿಎಚ್‌ಒ ಡಾ ಕುಮಾರಸ್ವಾಮಿ ಮಾತನಾಡಿ, ಎಚ್.ಡಿ.ಕೋಟೆ ಮತ್ತು ಸರಗೂರು ತಾಲೂಕಿನಲ್ಲಿ ರೋಗಿಗಳ ಅನುಕೂಲಕ್ಕಾಗಿ ಡಯಾಲಿಸಿಸ್ ಕೇಂದ್ರ ಅವಶ್ಯವಿತ್ತು. ಈ ನಿಟ್ಟಿನಲ್ಲಿ ಕೇಂದ್ರವನ್ನು ಪ್ರಾರಂಭಿಸಿದ್ದೇವೆ ಎಂದು ತಿಳಿಸಿದರು.


ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಾಧಿಕಾ ಶ್ರೀನಾಥ್, ಸದಸ್ಯರಾದ ಶ್ರೀನಿವಾಸ್, ವೀರೇಶ್, ಚೆಲುವ ಕೃಷ್ಣ, ಜಿ.ಪಂ. ಮಾಜಿ ಸದಸ್ಯ ರವಿ, ತಹಸೀಲ್ದಾರ್ ರುಕೀಯಾ ಬೇಗಂ, ತಾಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುನಾಥ್, ಯೂತ್ ಕಾಂಗ್ರೆಸ್ ಅಧ್ಯಕ್ಷ ಶಿವರಾಜು ಕಂದೇಗಾಲ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net