ಯೋಜನೆಗಳ ಅನುಷ್ಠಾನಕ್ಕೆ ಶ್ರಮಿಸುವೆ: ನೂತನ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ ಭರವಸೆ

20CBP5
Published on

ಚಿಕ್ಕಬಳ್ಳಾಪುರ: ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಚಿಕ್ಕಬಳ್ಳಾಪುರವನ್ನು ಮಾದರಿ ಜಿಲ್ಲೆಯನ್ನಾಗಿಸಲು ಶ್ರಮಿಸಲಾಗುವುದು ಎಂದು ನೂತನ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ ಭರವಸೆ ನೀಡಿದರು.


ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಹೊಸ ಪ್ರದೇಶಕ್ಕೆ ವರ್ಗಾವಣೆಯಾದಾಗ ಅಲ್ಲಿ ತೋರಬೇಕಾದ ಸಾಧನೆಯ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಲ್ಲಿ ನಾನಾ ಆಶಯಗಳು ಮೂಡುವುದು ಸಹಜ. ಹಾಗೆಯೇ ಜನರಲ್ಲೂ ಅಭಿವೃದ್ಧಿಯ ನಿರೀಕ್ಷೆಗಳು ಕಂಡು ಬರುತ್ತವೆ. ಇದಕ್ಕೆ ಅನುಗುಣವಾಗಿ ಎಲ್ಲರ ನಾಡಿಮಿಡಿತ ಅರಿತು ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಬೇಕಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಉತ್ಸಾಹದಲ್ಲಿ ಕೆಲಸ ನಿರ್ವಹಿಸಲಾಗುವುದು ಎಂದರು.

ಪ್ರಮುಖವಾಗಿ ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಸೇರಿ ಮೂಲ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಗಮನ ನೀಡಲಾಗುವುದು. ಜಿಲ್ಲೆಯನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಿ, ಪ್ರಗತಿ ರಥವನ್ನು ಮುನ್ನಡೆಸಲು ಎಲ್ಲರ ಸಹಕಾರ ಅಗತ್ಯ ಎಂದರು. ಅಪರ ಜಿಲ್ಲಾಧಿಕಾರಿ ಅಮರೇಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಜುಂಜಣ್ಣ, ವಾರ್ತಾ ಸಹಾಯಕ ಮಂಜುನಾಥ್ ಇದ್ದರು.


ಅಕ್ರಮ ಒತ್ತುವರಿ ತೆರವು: ನೀರಾವರಿ ಪ್ರಮುಖ ಮೂಲಗಳಾಗಿರುವ ಕೆರೆಗಳ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕು. ಇದಕ್ಕಾಗಿ ಸರ್ಕಾರದಿಂದ ಪ್ರತಿ ವರ್ಷ ಕೋಟ್ಯಂತರ ರೂಪಾಯಿ ಅನುದಾನ ಬಿಡುಗಡೆಯಾಗುತ್ತಿದೆ. ಇದರ ನಡುವೆ ಹಲವೆಡೆ ಕೆರೆ ಮತ್ತು ರಾಜಕಾಲುವೆಗಳ ಅಕ್ರಮ ಒತ್ತುವರಿಯು ದೊಡ್ಡ ಸಮಸ್ಯೆಯಾಗಿದೆ. ಈ ಭಾಗದಲ್ಲಿ ಸ್ಥಿತಿಗತಿಗಳ ಬಗ್ಗೆ ವರದಿ ತರಿಸಿಕೊಂಡು, ಏನಾದರೂ ಸಮಸ್ಯೆಗಳಿದ್ದಲ್ಲಿ ಪರಿಹರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಎಚ್.ಎನ್.ವ್ಯಾಲಿ ಯೋಜನೆಯ ಮೂಲಕ ಜಿಲ್ಲೆಯ ವಿವಿಧ ಕೆರೆಗಳಿಗೆ ನೀರನ್ನು ಹರಿಸಲಾಗುತ್ತಿದೆ. ಇದರ ಜತೆಗೆ ಇಲ್ಲಿ ಹೆಚ್ಚಿನ ನೀರಾವರಿ ಸೌಲಭ್ಯ ಅಗತ್ಯವಿದೆ. ಈ ವಿಚಾರದಲ್ಲಿ ಎಲ್ಲರ ಸಹಕಾರದೊಂದಿಗೆ ಜಲಜೀವನ್ ಮಿಷನ್ ಸೇರಿ ಹಲವು ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ತಿಳಿಸಿದರು.


ಕಿರಿದಾದ ರಸ್ತೆಗಳ ಕಡೆಗೆ ಗಮನ: ಜಿಲ್ಲಾ ಕೇಂದ್ರದಲ್ಲಿ ಕಿರಿದಾದ ರಸ್ತೆಗಳ ಕಿರಿಕಿರಿ, ಹಲವೆಡೆ ರಸ್ತೆಗಳ ವಿಸ್ತರಣೆ, ಹದಗೆಟ್ಟ ರಸ್ತೆಗಳ ಅಭಿವೃದ್ಧಿ ವಿಚಾರವಾಗಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುತ್ತದೆ. ಇದಕ್ಕೆ ಅಗತ್ಯವಿರುವ ಕಡೆ ಅನಿರೀಕ್ಷಿತ ಭೇಟಿ ಪರಿಶೀಲಿಸುವುದರ ಜತೆಗೆ ಸಮಸ್ಯೆಗಳ ವಿಚಾರವಾಗಿ ಅಭಿಪ್ರಾಯ ಸಂಗ್ರಹಿಸಲಾಗುವುದು. ಇನ್ನು ನಗರ, ಪಟ್ಟಣ ಪ್ರದೇಶಗಳಲ್ಲಿ ಅಭಿವೃದ್ಧಿಗೆ ನಗರೋತ್ಥಾನ ಯೋಜನೆ ಯ ಅನುದಾನವನ್ನು ಬಳಸಿಕೊಂಡು ಉತ್ತಮ ರಸ್ತೆಗಳನ್ನು ನಿರ್ಮಿಸಬಹುದು ಎಂದು ಡಿಸಿ ತಿಳಿಸಿದರು.


ಸಕ್ರಮ ಗಣಿಗಾರಿಕೆಗೆ ಅವಕಾಶ: ಜಿಲ್ಲೆಯಲ್ಲಿ ಕಟ್ಟಡ ನಿರ್ಮಾಣ, ಇತರ ಕಾಮಗಾರಿಗಳು ಸೇರಿ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಕಲ್ಲು ಗಣಿಗಾರಿಕೆ ಅಗತ್ಯವಿದೆ. ಆದರೆ, ಇದು ಸರ್ಕಾರದ ಮತ್ತು ಪರಿಸರ ಮಾಲಿನ್ಯ ನಿಯಂತ್ರಣ ಇಲಾಖೆಯ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕು. ಇದೇ ವೇಳೆ ಸುರಕ್ಷತೆಯ ಕ್ರಮಗಳ ವಿಚಾರದಲ್ಲಿ ಯಾವುದೇ ಕಾರಣಕ್ಕೂ ಲೋಪಗಳಿಗೆ ಅವಕಾಶ ನೀಡಬಾರದು ಎಂದು ಡಿಸಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net