ಅಪೌಷ್ಟಿಕತೆ ಹೋಗಲಾಡಿಸಲು ಮೊಟ್ಟೆ ವಿತರಣೆ

25-GPT-3
Published on

ಗುಂಡ್ಲುಪೇಟೆ: ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳಿಗೆ ಸರ್ಕಾರ ಉಚಿತ ಶಿಕ್ಷಣ, ಸಮವಸ್ತ್ರ, ಮಧ್ಯಾಹ್ನದ ಬಿಸಿಯೂಟದೊಂದಿಗೆ ಮೊಟ್ಟೆ ನೀಡುವ ಕಾರ್ಯಕ್ರಮ ಹಾಕಿಕೊಂಡಿದೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.


ತಾಲೂಕಿನ ಬೇಗೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಅಜೀಂ ಪ್ರೇಮ್‌ಜಿ ಫೌಂಡೇಷನ್ ವತಿಯಿಂದ ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮದಡಿ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸರ್ಕಾರ ಗುಣಮಟ್ಟದ ಶಿಕ್ಷಣ ಹಾಗೂ ಪೌಷ್ಟಿಕ ಆಹಾರ ನೀಡುವ ಮೂಲಕ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಕಾರ್ಯಕ್ರಮ ಹಾಕಿಕೊಂಡಿದೆ. ಮಕ್ಕಳಲ್ಲಿನ ಅಪೌಷ್ಟಿಕತೆ ಹೋಗಲಾಡಿಸಲು ರಾಜ್ಯ ಸರ್ಕಾರ ವಾರದಲ್ಲಿ ಎರಡು ದಿನ ಮೊಟ್ಟೆ ನೀಡುವ ಕಾರ್ಯಕ್ರಮವನ್ನು ಈಗಾಗಲೇ ಜಾರಿಗೊಳಿಸಿತು. ಇದಕ್ಕೆ ಪೂರಕವಾಗಿ ಅಜೀಂ ಪ್ರೇಮ್‌ಜಿ ಫೌಂಡೇಷನ್ ಅವರು ತಮ್ಮ ಸಿಎಸ್‌ಆರ್ ಅನುದಾನದಲ್ಲಿ ಸುಮಾರು 1591 ಕೋಟಿ ರೂ. ನೀಡುವ ಮೂಲಕ ಮುಂದಿನ ಮೂರು ವರ್ಷಗಳಿಗೆ ಸರ್ಕಾರಿ ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವ ಯೋಜನೆಗೆ ಸಹಕಾರ ನೀಡಿದ್ದಾರೆ. ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮದಡಿ ಒಂದರಿಂದ 10ನೇ ತರಗತಿಯ ಸರ್ಕಾರಿ ಶಾಲೆಗಳ ಮಕ್ಕಳಿಗೆ ವಾರದಲ್ಲಿ ಆರು ದಿನ ಬೇಯಿಸಿದ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.


ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್.ಸ್ವಾಮಿ, ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ರೇವಣ್ಣ, ಸಹಾಯಕ ನಿರ್ದೇಶಕ ಸತೀಶ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಡಾ.ಸರೋಜಾ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಎಂ.ಮುನಿರಾಜು, ಮಾಜಿ ಸದಸ್ಯ ಮಹೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net