ಮೊಟ್ಟೆ ಸೇವಿಸದವರಿಗೆ ಬಾಳೆಹಣ್ಣು, ಶೇಂಗಾ ಚಿಕ್ಕಿ

251
Published on

ಹೊಸದುರ್ಗ: ಶಾಲಾ ಮಕ್ಕಳ ದೈಹಿಕ ಆರೋಗ್ಯವನ್ನು ಉತ್ತಮಪಡಿಸುವ ಮೂಲಕ ಶೈಕ್ಷಣಿಕ ವ್ಯವಸ್ಥೆಯನ್ನು ಬಲಪಡಿಸುವ ಕೆಲಸಕ್ಕೆ ಸರ್ಕಾರ ಮುಂದಾಗಿದೆ ಎಂದು ಶಾಸಕ ಬಿ.ಜಿ.ಗೋವಿಂದಪ್ಪ ತಿಳಿಸಿದರು.

ತಾಲೂಕಿನ ಲಕ್ಕಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಬುಧವಾರ ಆಯೋಜಿಸಿದ್ದ ಪೂರಕ ಪೌಷ್ಠಿಕ ಆಹಾರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸರ್ಕಾರಿ ಶಾಲೆಯ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜತೆಗೆ ಮೊಟ್ಟೆ ವಿತರಣೆ ಮಾಡಲಾಗುತ್ತಿದೆ. ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆ ಹಣ್ಣು ಹಾಗೂ ಶೇಂಗಾ ಚಿಕ್ಕಿ ನೀಡಲಾಗುತ್ತದೆ. ಶಿಕ್ಷಕರು ತಾಲೂಕಿನ ಎಲ್ಲ ಶಾಲೆಗಳಲ್ಲೂ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು ಎಂದರು.

ಬಡವರ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರಕಿಸುವ ಉದ್ದೇಶದಿಂದ ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಸೌಲಭ್ಯ ಒದಗಿಸಲಾಗುತ್ತಿದೆ. ಸರ್ಕಾರಿ ಶಾಲೆಯಲ್ಲಿ ಬಹುತೇಕ ಕೃಷಿಕರು, ಕೂಲಿ ಕಾರ್ಮಿಕರ ಮಕ್ಕಳು ಕಲಿಯುತ್ತಿದ್ದಾರೆ. ಇವರ ಭವಿಷ್ಯ ಉಜ್ವಲಗೊಳಿಸಲು ಹೆಚ್ಚಿನ ಒತ್ತು ನೀಡಲಾಗಿದೆ ಎಂದು ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸೈಯದ್ ಮೋಸಿನ್ ಮಾತನಾಡಿ, ಮಕ್ಕಳಿಗೆ ಪೌಷ್ಟಿಕಾಂಶ ಒದಗಿಸುವ ಉದ್ದೇಶದಿಂದ ರಜಾದಿನ ಹೊರತು ಪಡಿಸಿ ನಿತ್ಯ ಮೊಟ್ಟೆ ನೀಡಲಾಗುತ್ತದೆ. ಶಾಸಕರ ಆದೇಶದ ಮೇರೆಗೆ ತಾಲೂಕಿನ ಸರ್ಕಾರಿ ಶಾಲೆಗಳ ಕಟ್ಟಡಗಳ ನವೀಕರಣ ಹಾಗೂ ನಿರ್ಮಾಣಕ್ಕೆ 30 ಕೋಟಿ ರೂ.ಅಂದಾಜು ವೆಚ್ಚದ ಕ್ರಿಯಾ ಯೋಜನೆಯನ್ನು ಶಿಕ್ಷಣ ಇಲಾಖೆಗೆ ಸಲ್ಲಿಸಲಾಗಿದೆ ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀದೇವಿ ಮುದ್ದಪ್ಪ, ಮುಖ್ಯಶಿಕ್ಷಕ ಗುತ್ತಿಕಟ್ಟೆ ಪ್ರಕಾಶ, ಎಸ್‌ಡಿಎಂಸಿ ಅಧ್ಯಕ್ಷ ವಿಜಯ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net