

ವಿಜಯವಾಣಿ ಸುದ್ದಿಜಾಲ ಮಧುರೆ
ದೊಡ್ಡಬಳ್ಳಾಪುರ ತಾಲೂಕು ಮಧುರೆ ಹೋಬಳಿಯ ಕನಸವಾಡಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಸೌಭಾಗ್ಯಾ ಉಮಾಶಂಕರ್ ಹಾಗೂ ಉಪಾಧ್ಯಕ್ಷರಾಗಿ ರಾಜಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
19 ಸದಸ್ಯರಿರುವ ಕನಸವಾಡಿ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸೌಭಾಗ್ಯಾ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ರಾಜಣ್ಣ ಮಾತ್ರ ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿಗಳು ಅಗತ್ಯ ಬಹುಮತ ವೀಕ್ಷಿಸಿ ಅವಿರೋಧ ಆಯ್ಕೆ ಪ್ರಕಟಿಸಿದರು. ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಘೊಷಣೆ ಬೆನ್ನಲ್ಲೇ ಕಾಂಗ್ರೆಸ್ ಬೆಂಬಲಿಗರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
ಪಕ್ಷಾತೀತವಾಗಿ ಎಲ್ಲ ಸದಸ್ಯರನ್ನು ಒಗ್ಗೂಡಿಸಿಕೊಂಡು ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಿ ಅಭಿವೃದ್ಧಿ ಮಾಡಲು ಹಗಲಿರುಳು ದುಡಿಯುತ್ತೇನೆ ಎಂದು ನೂತನ ಅಧ್ಯಕ್ಷ ಕೆ.ಸಿ.ಸೌಭಾಗ್ಯ ಉಮಾಶಂಕರ್ ಹೇಳಿದರು. ನನ್ನನ್ನು ಉಪಾಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲ ಸದಸ್ಯರಿಗೆ ಋಣಿಯಾಗಿರುತ್ತೇನೆ. ಒಗ್ಗಟ್ಟಿನಿಂದ ನಮ್ಮ ಇತಿಮಿತಿಯಲ್ಲಿ ಕೆಲಸ ಮಾಡಲು ಅವಿರತ ದುಡಿಯುತ್ತೇನೆ ಎಂದು ಉಪಾಧ್ಯಕ್ಷ ರಾಜಣ್ಣ ಭರವಸೆ ನೀಡಿದರು.