ಮೂಲಸೌಕರ್ಯ ಒದಗಿಸದಿದ್ದರೆ ಚುನಾವಣೆ ಬಹಿಷ್ಕಾರ

vote
Published on

ಮೈಸೂರು: ಭೂಮಿ, ವಸತಿ ಮುಂತಾದ ಮೂಲ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದು ಭರವಸೆ ನೀಡದಿದ್ದರೆ ಲೋಕಸಭಾ ಚುನಾವಣೆ ಬಹಿಷ್ಕರಿಸಲಾಗುವುದು ಎಂದು ಪ್ರಗತಿಪರ ದಲಿತ ಒಕ್ಕೂಟ ಜಿಲ್ಲಾ ಸಮಿತಿಯ ಜಿಲ್ಲಾಧ್ಯಕ್ಷ ಎಂ.ಶಿವಣ್ಣ ಕಂದೇಗಾಲ ಎಚ್ಚರಿಸಿದರು.

ಭೂ ಮಾಲೀಕರು ಒತ್ತುವರಿ ಮಾಡಿಕೊಂಡು ಕಬಳಿಸಿರುವ ಭೂಮಿ ಬಿಡಿಸಿ ಭೂಹೀನ ಬಡವರಿಗೆ ಹಂಚಿಕೆ ಮಾಡಬೇಕು. ಭೂ ಹೀನ ಬಡವರು ಹಲವಾರು ವರ್ಷಗಳಿಂದ ವ್ಯವಸಾಯ ಮಾಡಿಕೊಂಡು ಸ್ವಾಧೀನದಲ್ಲಿರುವ ಜಮೀನಿಗೆ ಸಾಗುವಳಿ ಪತ್ರ ನೀಡಬೇಕು. ವಸತಿಹೀನ ಬಡವರಿಗೆ ನಿವೇಶನ ಹಂಚಿಕೆ ಮಾಡಿ ಮನೆ ನಿರ್ಮಿಸಿಕೊಡಬೇಕು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಾಗಿರುವ ಹಣವನ್ನು ಸರಿಯಾಗಿ ಬಳಕೆ ಮಾಡದೆ ದುರುಪಯೋಗ ಮಾಡುವ ಅಧಿಕಾರಿಗಳು ಮತ್ತು ಇದಕ್ಕೆ ಕುಮ್ಮಕ್ಕು ನೀಡುವ ರಾಜಕಾರಣಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು ಮಾಡಿ ಇವರ ಹುದ್ದೆ, ಸ್ಥಾನಮಾನಗಳನ್ನು ವಜಾ ಮಾಡಬೇಕು ಎಂದು ಆಗ್ರಹಿಸಿದರು.

ಎಲ್ಲ ಬಡಮಕ್ಕಳಿಗೆ ಉನ್ನತ ಶಿಕ್ಷಣದ ತನಕ ಆರೋಗ್ಯ ಮತ್ತು ಮೂಲ ಸಮಸ್ಯೆಗಳನ್ನು ಉಚಿತವಾಗಿ ಕೊಡಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರದಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕು. ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿಯನ್ನು ಕಡ್ಡಾಯವಾಗಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಕಾರ್ಯದರ್ಶಿ ಅನುಷಾ, ಜಿಲ್ಲಾ ಉಪಾಧ್ಯಕ್ಷ ಬಸವರಾಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net