ಚುನಾವಣಾ ಆಯೋಗ ಬಿಜೆಪಿ ಸರ್ಕಾರದ ಕೈಗೊಂಬೆ

saleem ahmad latest
Published on

ಹುಬ್ಬಳ್ಳಿ: ಕೇಂದ್ರ ಚುನಾವಣಾ ಆಯೋಗ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ ಶಾ ಮಾರ್ಗದರ್ಶನದಲ್ಲಿ ನಡೆಯುತ್ತಿದೆ. ಬಿಜೆಪಿ ಸರ್ಕಾರದ ಕೈಗೊಂಬೆಯಾಗಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಆರೋಪಿಸಿದರು.

ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಅ. 5ರಂದು ಬೆಳಗ್ಗೆ 10.30 ಚುನಾವಣೆ ಆಯೋಗದ ವಿರುದ್ಧ ‘ನಮ್ಮ ಮತ ನಮ್ಮ ಅಧಿಕಾರ, ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ’ ಪ್ರತಿಭಟನೆ ಆಯೋಜಿಸಲಾಗಿದೆ. ರಾಜ್ಯದ ವಿವಿಧೆಡೆಯಿಂದ 1 ಲಕ್ಷ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವರು ಎಂದು ತಿಳಿಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಿ. ವೇಣುಗೋಪಾಲ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲಾ ಇತರರು ಪಾಲ್ಗೊಳ್ಳುವರು. ಪ್ರತಿಭಟನೆ ಬಳಿಕ ನಾಯಕರು ಚುನಾವಣಾ ಆಯೋಗದ ಕಚೇರಿಗೆ ತೆರಳಿ ಮನವಿ ಸಲ್ಲಿಸುವರು ಎಂದರು.

ಬೆಂಗಳೂರು ಸೆಂಟ್ರಲ್ ವಿಧಾನಸಭಾ ಕೇಂದ್ರದಲ್ಲಿ ಕಳೆದ ಲೋಕಸಭೆ ಚುನಾವಣೆ ವೇಳೆ 3-4 ತಿಂಗಳಲ್ಲಿ 40 ಸಾವಿರ ಹೊಸ ಮತದಾರರು ನೋಂದಾಯಿಸಲ್ಪಟ್ಟಿದ್ದರು. 5-6 ತಿಂಗಳಲ್ಲಿ ರಾಜ್ಯದಲ್ಲಿ 28 ಲಕ್ಷ ಹೊಸ ಮತದಾರರು ಹೊಸದಾಗಿ ಸೇರ್ಪಡೆಯಾಗಿರುವುದು ಶಂಕಾಸ್ಪದವಾಗಿದೆ. ಕೆಲವು ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿಗೆ ಚುನಾವಣಾ ಆಯೋಗ ಕಾರಣವಾಗಿದೆ. ಕೇಂದ್ರ ಸರ್ಕಾರ, ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದರು.

ತಿರುಕನ ಕನಸು

ಡಿ.ಕೆ. ಶಿವಕುಮಾರ ಬಿಜೆಪಿ ಸೇರುತ್ತಾರೆಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ ಹೇಳಿರುವುದು ತಿರುಕನ ಕನಸಿನಂತೆ ಭಾಸವಾಗುತ್ತಿದೆ. ವಿದ್ಯಾರ್ಥಿ ಕಾಂಗ್ರೆಸ್, ಯುವ ಕಾಂಗ್ರೆಸ್​ನಿಂದ ಬೆಳೆದು ಬಂದವರು ಪಕ್ಷ ಬಿಟ್ಟು ಹೋಗಲು ಸಾಧ್ಯವೇ ಇಲ್ಲ. ಮಹದಾಯಿ ವಿಚಾರದಲ್ಲಿ ಬಿಜೆಪಿಯವರಿಗೆ ನಾಚಿಕೆಯಾಗಬೇಕು. ಕೇಂದ್ರ ಸರ್ಕಾರದಿಂದ ಪರವಾನಗಿ ಕೊಡಿಸುವ ಕೆಲಸ ಆಗಬೇಕು ಎಂದರು. ಸುದ್ದಿಗೋಷ್ಠಿಯಲ್ಲಿ ಶಾಸಕ ಎನ್.ಎಚ್. ಕೋನರಡ್ಡಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸದಾನಂದ ಡಂಗನವರ, ಅನಿಲಕುಮಾರ ಪಾಟೀಲ, ಅಲ್ತಾಫ್ ಹಳ್ಳೂರ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net