

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಸಾರ್ವತ್ರಿಕ ಲೋಕಸಭಾ ಚುನಾವಣೆ ಸಂಬಂಧ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣೆಯನ್ನು ಪಾರದರ್ಶಕವಾಗಿ ನಡೆಸುವ ಸಲುವಾಗಿ ಚುನಾವಣೆ ಅಕ್ರಮಗಳನ್ನು ತಡೆಯುವುದು ಅಗತ್ಯವಿದೆ ಈ ನಿಟ್ಟಿನಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚಿನ ತಪಾಸಣೆ ನಡೆಸಬೇಕು ಎಂದು ರಾಜ್ಯ ವಿಶೇಷ ಚುನಾವಣೆ ವೆಚ್ಚ ವೀಕ್ಷಕ ಮುರಳಿಕುಮಾರ್ ಚುನಾವಣಾ ಅಧಿಕಾರಿಗಳಿಗೆ ಸೂಚಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಚುನಾವಣೆ ವೆಚ್ಚ ವೀಕ್ಷಣೆ ಕುರಿತ ಸಭೆಯಲ್ಲಿ ಮಾತನಾಡಿದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದ ಅವರು ಚುನಾವಣೆಯನ್ನು ಪಾರದರ್ಶಕವಾಗಿ ನಡೆಸುವ ದೃಷ್ಟಿಕೋನದಲ್ಲಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಬೇಕು. ಅಕ್ರಮ ಮದ್ಯ, ನಗದು ಸಾಗಾಟದ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಿ 10 ಲಕ್ಷಕ್ಕೂ ಅಧಿಕ ಮೌಲ್ಯದ ನಗದು ಅಥವಾ ವಸ್ತುಗಳು ಪತ್ತೆಯಾದಲ್ಲಿ ತಕ್ಷಣವೇ ವೆಚ್ಚ ವೀಕ್ಷಕರಿಗೆ ಮಾಹಿತಿ ನೀಡಿ ವರದಿ ಸಲ್ಲಿಸಬೇಕು ಎಂದು ಹೇಳಿದರು.
ಜಾಗೃತಿ ಮೂಡಿಸಬೇಕು: ಕಳೆದ ಚುನಾವಣೆಯಲ್ಲಿ ಕಡಿಮೆ ಮತದಾನ ನಡೆದ ಕ್ಷೇತ್ರಗಳಲ್ಲಿ ಮತದಾನ ಕುರಿತು ವಿಶೇಷ ಜಾಗೃತಿ ಮೂಡಿಸಬೇಕು. ಅಬಕಾರಿ, ವಾಣಿಜ್ಯ ತೆರಿಗೆ, ಆದಾಯ ತೆರಿಗೆ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಸ್ವಯಂ ಪ್ರೇರಿತ ದಾಳಿ, ತಪಾಸಣೆ ನಡೆಸಿ. ಸೂಕ್ತ ಮಾರ್ಗದಲ್ಲಿ ಅಧಿಕಾರಿಗಳ ಸಹಕಾರ, ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಮುರುಳಿಕುಮಾರ್ ಚುನಾವಣಾಧಿಕಾರಿಗಳಿಗೆ ಸೂಚಿಸಿದರು.
13 ರಿಂದ 18 ವರೆಗೆ ಮನೆ ಮನೆ ಮತದಾನ: ಚುನಾವಣಾ ಆಯೋಗದ ಮಾರ್ಗಸೂಚಿಗಳಂತೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಲ್ಲಿ ಮನೆ ಮತದಾನಕ್ಕೆ ಆಯ್ಕೆ ಮಾಡಿಕೊಳ್ಳಲಾದ 85 ವರ್ಷ ಮೇಲ್ಪಟ್ಟ ಹಿರಿಯ ಮತದಾರರು ಹಾಗೂ ವಿಕಲಚೇತನ ಮತದಾರರಿಂದ ಏ.13 ರಿಂದ 18 ರವರೆಗೆ 4 ವಿಧಾನಸಭಾ ಕ್ಷೇತ್ರಗಳಲ್ಲಿ ಮನೆ ಮತದಾನ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ತಿಳಿಸಿದರು. ಮನೆ ಮತದಾನಕ್ಕೆ ಈಗಾಗಲೇ ಅಗತ್ಯ ಸಿಬ್ಬಂದಿ ನೇಮಕ ಮಾಡಲಾಗಿದೆ, ಆದ್ದರಿಂದ ಮನೆ ಮತದಾನಕ್ಕೆ ಆಯ್ಕೆ ಮಾಡಿಕೊಳ್ಳಲಾದ ಮತದಾರರು ತಾವು ನೀಡಲಾದ ವಿಳಾಸದಲ್ಲಿ ಹಾಜರಿದ್ದು, ಮನೆ ಮತದಾನದ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು ಈ ಬಗ್ಗೆ ಅಧಿಕಾರಿಗಳು ಮತದಾರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು. ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಮತಗಟ್ಟೆ ಸಿಬ್ಬಂದಿಗೆ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.12 ರಂದು ತರಬೇತಿ ನಿಗಧಿಪಡಿಸಲಾಗಿತ್ತು. ಕಾರಣಾಂತರಗಳಿಂದ ಏ. 20 ರಂದು ಮುಂದೂಡಲಾಗಿದೆ ಹಾಗೂ ತರಬೇತಿಯ ಸ್ಥಳ ಮತ್ತು ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಡಿಸಿ ತಿಳಿಸಿದರು.