

ಕಾರವಾರ:ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ, ಜಿಲ್ಲೆಯಲ್ಲಿ ಮುಕ್ತ, ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆಗಾಗಿ, ಚುನಾವಣಾ ಆಯೋಗ ನೀಡಿರುವ ಆದೇಶಗಳು ಮತ್ತು ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸುವ ಮೂಲಕ ಚುನಾವಣೆಯನ್ನು ಯಶಸ್ವಿಗೊಳಿಸುವಂತೆ, ಲೋಕಸಭಾ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿರುವ ಎಲ್ಲಾ ಸಹಾಯಕ ಚುನಾವಣಾಧಿಕಾರಿಗಳಿಗೆ ಮತ್ತು ವಿವಿಧ ನೋಡೆಲ್ ಅಧಿಕಾರಿಗಳಿಗೆ ಚುನಾವಣಾ ವೀಕ್ಷಕ ರಾಜೀವ್ ರತನ್ ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಚುನಾವಣಾ ಆಯೋಗವು ಚುನಾವಣಾ ಪ್ರಕ್ರಿಯೆಯ ಪ್ರತಿಯೊಂದು ಹಂತದಲ್ಲಿ ಅಧಿಕಾರಿಗಳು ನಿರ್ವಹಿಸಬೇಕಾದ ಕರ್ತವ್ಯಗಳ ಕುರಿತಂತೆ ಅತ್ಯಂತ ಸ್ಪಷ್ಟವಾಗಿ ಮತ್ತು ವಿವರವಾಗಿ ತಿಳಿಸಿದ್ದು, ಎಲ್ಲಾ ಅಧಿಕಾರಿಗಳು ತಮ್ಮ ಕರ್ತವ್ಯಗಳ ಬಗ್ಗೆ ತಮಗೆ ನೀಡಿರುವ ಕೈಪಿಡಿಯನ್ನು ಅಧ್ಯಯನ ಮಾಡಿ, ಅದರಂತೆಯೇ ಕಾರ್ಯನಿರ್ವಹಿಸಬೇಕು. ಚುನಾವಣಾ ಸಂದರ್ಭದಲ್ಲಿ ಯಾವುದೇ ಗೊಂದಲಗಳಿದ್ದಲ್ಲಿ ನೇರವಾಗಿ ತನ್ನನ್ನು ಸಂಪರ್ಕಿಸುವAತೆ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲೆಯಲ್ಲಿ ಸುಗಮ ಚುನಾವಣೆಗಾಗಿ ರಚಿಸಲಾಗಿರುವ ವಿವಿಧ ಸಮಿತಿಗಳ ನೋಡಲ್ ಅಧಿಕಾರಿಗಳಿಂದ ಇದುವರೆಗೆ ನಿರ್ವಹಿಸಿರುವ ಕರ್ತವ್ಯಗಳ ಕುರಿತಂತೆ ಮಾಹಿತಿ ಪಡೆದ ಅವರು, ಚುನಾವಣೆಯ ಎಲ್ಲಾ ಪ್ರಕ್ರಿಯೆಗಳು ಪಾರದರ್ಶಕತೆಯಿಂದ ಕೂಡಿರುವಂತೆ ಕರ್ತವ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಮಾತನಾಡಿ, ಚುನಾವಣಾ ಕಣದಲ್ಲಿರುವ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳಿಂದ ಯಾವುದೇ ದೂರುಗಳು ಸ್ವೀಕೃತವಾಗದಂತೆ ಎಲ್ಲಾ ಆಧಿಕಾರಿಗಳು ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸುವುದುರ ಮೂಲಕ, ಜಿಲ್ಲೆಯಲ್ಲಿ ಸುಗಮ ರೀತಿಯಲ್ಲಿ ಚುನಾವಣೆ ನಡೆಯುವಂತೆ ನೋಡಿಕೊಳ್ಳಬೇಕು ಎಂದರು.
ಸಭೆಯಲ್ಲಿ ಸ್ವೀಪ್ ನೋಡಲ್ ಅಧಿಕಾರಿ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ಸಹಾಯಕ ಚುನಾವಣಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಉಪವಿಭಾಗಾಧಿಕಾರಿ ಕನಿಷ್ಕ ಹಾಗೂ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳು ಮತ್ತು ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.