ಚುನಾವಣಾ ನಿಯಮ ಕಟ್ಟುನಿಟ್ಟಾಗಿ ಪಾಲಿಸಿ

18manju6-Web
ಬೆಳಗಾವಿ ನಗರದಲ್ಲಿರುವ ಮಸ್ಟ್‌ರಿಂಗ್ ಮತ್ತು ಡಿಮಸ್ಟ್‌ರಿಂಗ್ ಕೇಂದ್ರಗಳಿಗೆ ಜಿಲ್ಲಾ ಚುನಾವಣಾಧಿಕಾರಿ ಎಂ.ಜಿ. ಹಿರೇಮಠ ಭೇಟಿ ನೀಡಿ ಪರಿಶೀಲಿಸಿದರು. ಪೊಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್, ತಹಸೀಲ್ದಾರ್ ಆರ್.ಕೆ. ಕುಲಕರ್ಣಿ ಇದ್ದರು.
Published on

ಬೆಳಗಾವಿ: ಗ್ರಾಪಂ ಚುನಾವಣೆಯನ್ನು ಪಾರದರ್ಶಕವಾಗಿ ನಡೆಸಲು ಅಧಿಕಾರಿಗಳು ಚುನಾವಣಾ ನಿಯಮಯಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಎಂ.ಜಿ. ಹಿರೇಮಠ ಸೂಚನೆ ನೀಡಿದ್ದಾರೆ.

ಗ್ರಾಪಂಗಳ ಮೊದಲ ಹಂತದಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ವಿವಿಧ ತಾಲೂಕು ಕೇಂದ್ರಗಳಲ್ಲಿರುವ ತರಬೇತಿ ಕೇಂದ್ರಗಳಿಗೆ ಶುಕ್ರವಾರ ಭೇಟಿ ನೀಡಿ ಮಾತನಾಡಿದ ಅವರು, ಪ್ರಸಕ್ತ ಗ್ರಾಪಂ ಚುನಾವಣೆಯಲ್ಲಿ ಹೆಚ್ಚಿನ ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದು, ಗೆಲುವಿಗಾಗಿ ಭಾರಿ ಪೈಪೋಟಿ ಕಂಡುಬರುತ್ತಿದೆ. ಹೀಗಾಗಿ ನಿಯೋಜಿತ ಅಧಿಕಾರಿಗಳು ಚುನಾವಣಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಶಿಸ್ತುಬದ್ಧವಾಗಿ ಕಾರ್ಯ ನಿರ್ವಹಿಸಬೇಕು. ಎಲ್ಲಿಯೂ ಅಕ್ರಮಕ್ಕೆ ಅವಕಾಶ ನೀಡಬಾರದು ಎಂದರು.

ಈಗಾಗಲೇ ಚುನಾವಣಾ ಪ್ರಕ್ರಿಯೆಗಳ ಕುರಿತು ಅಗತ್ಯ ತರಬೇತಿ ನೀಡಲಾಗಿದೆ. ಈ ಕುರಿತು ಸಂದೇಹಗಳಿದ್ದರೆ ಸಂಬಂಧಿಸಿದ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿ ಪರಿಹರಿಸಿಕೊಳ್ಳಬೇಕು. ಚುನಾವಣಾ ಆಯೋಗದ ಮಾರ್ಗಸೂಚಿಯನ್ವಯ ಎಲ್ಲ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಿರೇಮಠ ಸಲಹೆ ನೀಡಿದರು.

ಪೊಲೀಸ್ ಆಯುಕ್ತ ಡಾ. ಕೆ.ತ್ಯಾಗರಾಜನ್, ಬೆಳಗಾವಿ ತಾಲೂಕು ತಹಸೀಲ್ದಾರ್ ಆರ್.ಕೆ. ಕುಲಕರ್ಣಿ ಇದ್ದರು.

ಕರ್ತವ್ಯಕ್ಕೆ ಕಡ್ಡಾಯವಾಗಿ ಹಾಜರಾಗಿ: ಗ್ರಾಪಂ ಚುನಾವಣೆಗೆ ನಿಯೋಜನೆಗೊಂಡಿರುವ ವಿವಿಧ ಇಲಾಖೆಗಳ ಎಲ್ಲ ಸಿಬ್ಬಂದಿ, ತರಬೇತಿ ಸೇರಿದಂತೆ ಚುನಾವಣಾ ಕರ್ತವ್ಯಕ್ಕೆ ಕಡ್ಡಾಯವಾಗಿ ಹಾಜರಾಗಬೇಕು. ಗೈರಾದರೆ ಅಥವಾ ನಿರ್ಲಕ್ಷ್ಯ ತೋರಿದರೆ ಅಂತಹವರ ವಿರುದ್ಧ ನಿಯಮಾವಳಿ ಪ್ರಕಾರ ಶಿಸ್ತುಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಚುನಾವಣಾ ತರಬೇತಿಗೆ ಗೈರು ಹಾಜರಾಗಿರುವವರು ಕೂಡಲೇ ಆಯಾ ತಾಲೂಕಿನ ತಹಸೀಲ್ದಾರ್ ಬಳಿ ವರದಿ ಮಾಡಿಕೊಳ್ಳಬೇಕು. ನ್ಯಾಯಸಮ್ಮತ ಮತ್ತು ಪಾರದರ್ಶಕವಾಗಿ ಚುನಾವಣೆ ನೆರವೇರಿಸಿಲು ನಿಯೋಜಿತ ಎಲ್ಲ ಅಧಿಕಾರಿಗಳು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net