

ಮಡಿಕೇರಿ: ಹದಿನೆಂಟು ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ ಮತದಾರರ ಗುರುತಿನ ಚೀಟಿ ಪಡೆಯಲು ಹೆಸರು ನೋಂದಾಯಿಸುವಂತೆ ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ತಿಳಿಸಿದರು.
ಪೊನ್ನಂಪೇಟೆ ತಾಲೂಕು ನಾಲ್ಕೇರಿ ಗ್ರಾ.ಪಂ.ವ್ಯಾಪ್ತಿಯ ಬೊಮ್ಮಾಡು ಹಾಡಿಯಲ್ಲಿ ಜಿಲ್ಲಾಡಳಿತ, ಜಿ.ಪಂ. ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಪೊನ್ನಂಪೇಟೆ ತಾ.ಪಂ.ಮತ್ತು ಕಂದಾಯ ಇಲಾಖೆ ಸಹಯೋಗದೊಂದಿಗೆ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕುಗಳ ವ್ಯಾಪ್ತಿಯಲ್ಲಿರುವ ಅರಣ್ಯವಾಸಿಗಳಾದ ಮೂಲ ನಿವಾಸಿ ಜೇನುಕುರುಬ ಹಾಗೂ ಯರವ, ಸೋಲಿಗ, ಕಾಡುಕುರುಬ, ಕುಡಿಯ, ಮಲೆಕುಡಿಯ ಜನಾಂಗದವರು ವಾಸಿಸುತ್ತಿರುವ ಹಾಡಿಗಳಲ್ಲಿ ಬುಧವಾರ ಆಯೋಜಿಸಿದ್ದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಮತದಾನ ಮಾಡುವುದು ಜವಾಬ್ದಾರಿಯುತ ನಾಗರಿಕರ ಕರ್ತವ್ಯವಾಗಿದ್ದು, ಕಡ್ಡಾಯವಾಗಿ ಮತದಾರರ ಗುರುತಿನ ಚೀಟಿ ಪಡೆದುಕೊಳ್ಳಬೇಕು. ೧೮ ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಮತದಾರರ ಗುರುತಿನ ಚೀಟಿ ಪಡೆಯಲು ಮತಗಟ್ಟೆ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು. ಮತದಾರರ ಚೀಟಿ ಪಡೆಯಲು ಅಗತ್ಯವಿರುವ ವಿವಿಧ ದಾಖಲೆಗಳನ್ನು ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಬಳಿಕ ಬೊಮ್ಮಾಡು ಹಾಡಿಯ ಗಿರಿಜನ ಆಶ್ರಮ ಶಾಲೆಗೆ ಭೇಟಿ ನೀಡಿದ ಡಾ.ಎಸ್.ಆಕಾಶ್ ಅವರು, ಮೂಲ ಸೌಕರ್ಯಗಳನ್ನು ಪರಿಶೀಲಿಸಿದರು. ಶಾಲಾ ಮಕ್ಕಳೊಂದಿಗೆ ಬೆರೆತು ಕಂಪ್ಯೂಟರ್ ಶಿಕ್ಷಣದ ಮಹತ್ವ ಕುರಿತು ಮನವರಿಕೆ ಮಾಡಿದರು. ಶಾಲಾ ಆವರಣವನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ಸಲಹೆ ಮಾಡಿದರು.
ಈ ಸಂದರ್ಭದಲ್ಲಿ ಜಿ.ಪಂ.ಮುಖ್ಯ ಯೋಜನಾಧಿಕಾರಿ ರಾಜ್‌ಗೋಪಾಲ್, ಐಟಿಡಿಪಿ ಅಧಿಕಾರಿ ಹೊನ್ನೇಗೌಡ, ತಾ.ಪಂ.ಇಒ ಅಪ್ಪಣ್ಣ, ನಾಲ್ಕೇರಿ ಗ್ರಾ.ಪಂ. ಅಧ್ಯಕ್ಷ ಎಚ್.ಆರ್.ಮೀನಾ, ಉಪಾಧ್ಯಕ್ಷ ಸಚಿನ್, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಸತೀಶ್ ಇತರರು ಇದ್ದರು.