

ಬಳ್ಳಾರಿ: ಸಮಾಜದಲ್ಲಿ ಹೆಣ್ಣಿನ ಪಾತ್ರ ಮುಖ್ಯವಾಗಿದ್ದು, ಪ್ರತಿ ಹೆಣ್ಣು ಮಗುವಿಗೆ ಶಿಕ್ಷಣ ಒದಗಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಎಚ್.ವಿಜಯಕುಮಾರ ಹೇಳಿದರು.
ನಗರದ ಡಿಸಿ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆ 10 ವರ್ಷ ಪೂರೈಸಿದ ಹಿನ್ನೆಲೆ ಸಮಾರೋಪ ಸಮಾರಂಭ ಹಾಗೂ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ಮಹಿಳೆ ಮತ್ತು ಮಕ್ಕಳ ಸುರಕ್ಷತೆ, ಭದ್ರತೆ ಮತ್ತು ಸಬಲೀಕರಣಕ್ಕಾಗಿ ಜಾಗೃತಿ ಮೂಡಿಸಲು ಶನಿವಾರ ಹಮ್ಮಿಕೊಂಡಿದ್ದ ಬೈಕ್ ರ‌್ಯಾಲಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಹಿಳೆಯರ ಮೇಲಿನ ತಾರತಮ್ಯ ಹಾಗೂ ನಕಾರಾತ್ಮಕ ಮನೋಭಾವ ತೊಲಗಿಸಬೇಕು. ಬಾಲ್ಯ ವಿವಾಹ ತಡೆದು ಹೆಣ್ಣು ಮಕ್ಕಳನ್ನು ರಕ್ಷಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಹೆಣ್ಣು ಭ್ರೂಣ ಹತ್ಯೆ ಕಾನೂನು ಅಪರಾಧ. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹಿಸಲು ಹಲವಾರು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಹೆಣ್ಣು ಲಿಂಗಾನುಪಾತವನ್ನು ಸುಧಾರಿಸಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯವಾಗಬೇಕು ಎಂದರು.