

ಸೋಮವಾರಪೇಟೆ: ಸಮಾನತೆಯ ಸಮಾಜ ನಿರ್ಮಾಣಗೊಳ್ಳುವಲ್ಲಿ ಡಾ.ಬಾಬು ಜಗಜೀವನರಾಮ್ ಅವರ ಕೊಡುಗೆ ಅಪಾರ. ಅವರ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕೆಂದು ತಹಸೀಲ್ದಾರ್ ನವೀನ್ ಕುಮಾರ್ ಅಭಿಪ್ರಾಯಿಸಿದರು.
ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ತಾಲೂಕು ಕಚೆೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಬಾಬು ಜಗಜೀವನರಾಮ್ ಜನ್ಮ ದಿನಾಚರಣೆಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ಬಾಬು ಜಗಜೀವನರಾಮ್ ಅವರು, ಜಾತಿಭೇದ ಮತ್ತು ಧರ್ಮಭೇದಗಳಿಲ್ಲದ ಯಾವುದೇ ಕಟ್ಟುಪಾಡುಗಳಿಲ್ಲದ ಶಿಕ್ಷಣಕ್ಕೆ ಅವಕಾಶ ನೀಡಬೇಕೆಂದು ಚಿಂತಿಸಿದ್ದರು. ಭಾರತದ ಸಂವಿಧಾನ ರಚನೆ ಸಂದರ್ಭ ಅವರು ವಿವಿಧ ಸಮಿತಿಗಳಲಿದ್ದು, ತಮ್ಮ ಅನುಭವವನ್ನು ಧಾರೆ ಎರೆದಿದ್ದರು. ಕಾರ್ಮಿಕರ ಹಾಗೂ ಶೋಷಿತರ ಕಲ್ಯಾಣಕ್ಕಾಗಿ ಹಲವಷ್ಟು ನೂತನ ಕಾಯ್ದೆಗಳನ್ನು ಜಾರಿಗೆ ತಂದಿದ್ದರು.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದೇಗೌಡ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕ್ಯಾನಾಯಕ್, ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳು ದಲಿತ ಪರ ಸಂಘಟನೆಯ ಮುಖಂಡರು ಇದ್ದರು.