

ಚಿತ್ರದುರ್ಗ: ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಮನೆ-ಮನೆಗೆ ತಲುಪಿಸುವ ಕೆಲಸ ಪಕ್ಷದ ಮುಖಂಡರು, ಕಾರ್ಯಕರ್ತರು ಮಾಡಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ ಸಲಹೆ ನೀಡಿದರು.
ನಗರದ ಖಾಸಗಿ ಹೋಟೆಲ್‌ವೊಂದರಲ್ಲಿ ಭಾನುವಾರ ಪಕ್ಷದ ಮುಖಂಡರೊಂದಿಗೆ ಚರ್ಚಿಸಿದ ಬಳಿಕ ಮಾತನಾಡಿ, ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಕಳೆದ ಬಾರಿಯಂತೆ ಈ ಬಾರಿಯೂ ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆಲ್ಲಿಸುವ ಮೂಲಕ ಪಕ್ಷಕ್ಕೆ ಬಲ ತುಂಬುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿ ಎಂದು ಕಿವಿಮಾತು ಹೇಳಿದರು.
ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ದೇಶದ ಚಿತ್ರಣವೇ ಬದಲಾಗಿದೆ. ಹಲವು ರಾಷ್ಟ್ರಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಭಾರತವನ್ನು ಮುನ್ನಡೆಸುತ್ತಿದ್ದಾರೆ. 9 ವರ್ಷದ ಅವಧಿಯಲ್ಲೇ ಅನೇಕ ಕಾರ್ಯಕ್ರಮಗಳನ್ನು ಜನರಿಗಾಗಿ ನೀಡಿದ್ದಾರೆ. ಈ ಕುರಿತು ಅರಿವು ಮೂಡಿಸಿ ಎಂದು ತಿಳಿಸಿದರು.
ಜಿಲ್ಲೆಯಲ್ಲೂ ಸಂಘಟನೆ ಅತ್ಯಂತ ಪ್ರಬಲವಾಗಬೇಕು. ಮುಂಬರುವ ಚುನಾವಣೆಗಳಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಜಯಿಸಬೇಕು. ಅದಕ್ಕಾಗಿ ಕಾರ್ಯತಂತ್ರ ರೂಪಿಸಿ. ಪಕ್ಷದ ತತ್ವ, ಸಿದ್ಧಾಂತ ಒಪ್ಪಿ ಬರುವವರನ್ನು ಆತ್ಮೀಯವಾಗಿ ಸ್ವಾಗತಿಸಿ ಎಂದು ಕರೆ ನೀಡಿದರು.
ಪಕ್ಷದ ಜಿಲ್ಲಾಧ್ಯಕ್ಷ ಎ.ಮುರಳಿ, ಪ್ರಧಾನ ಕಾರ್ಯದರ್ಶಿ ನರೇಂದ್ರ ಹೊನ್ನಾಳ್, ರೈತ ಮೊರ್ಚಾ ಜಿಲ್ಲಾಧ್ಯಕ್ಷ ಟಿ.ವೆಂಕಟೇಶ್ ಯಾದವ್, ವಕ್ತಾರ ನಾಗರಾಜ್ ಬೇದ್ರೆ ಇತರರಿದ್ದರು.