

ಕೋಲಾರ: ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸೇರಿದವರ ಮೇಲಿನ ದೌರ್ಜನ್ಯ ಕುರಿತು ದೂರುಗಳು ದಾಖಲಾದಲ್ಲಿ ಸಂಬಂಧಿಸಿದ ದೂರುಗಳ ಬಗ್ಗೆ ತ್ವರಿತ ಕ್ರಮ ಕೈಗೊಳ್ಳಬೇಕು. ಹಾಗೂ ಸಂಬಂಧಿಸಿದ ಸಭೆಗಳಿಗೆ ಸಮರ್ಪಕ ಮಾಹಿತಿ ಒದಗಿಸದಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಎಸ್ಸಿ ಮತ್ತು ಎಸ್ಟಿ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆಯಲ್ಲಿ ಮಾತನಾಡಿ, ಜಿಲ್ಲಾಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ (ದೌರ್ಜನ್ಯ ತಡೆ) ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯಕ್ಕೆ ಸಂಬಂಧ ಇರುವ ಪ್ರಕರಣಗಳ ಬಗ್ಗೆ ಸಂಪೂರ್ಣ ಮಾಹಿತಿಯೊಂದಿಗೆ ಸಭೆಗೆ ಆಗಮಿಸಬೇಕು. ಆ ಸಮಸ್ಯೆ ಸಂಬಂಧ ಬಗೆಹರಿಸಲು ಅಗತ್ಯ ಕ್ರಮವಹಿಸಬೇಕು. ತಾತ್ಸಾರದ ಮನೋಭಾವನೆಯಿಂದ ಕೆಲಸ ನಿರ್ವಹಿಸಿದರೆ ಅಂತಹ ಅಧಿಕಾರಿಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಆಯಾ ತಾಲೂಕುಗಳ ವ್ಯಾಪ್ತಿಯಲ್ಲಿ ಎಸ್.ಸಿ ಮತ್ತು ಎಸ್.ಟಿ ಸಮುದಾಯದ ಮುಖಂಡರು ಹಾಗೂ ಜಿಲ್ಲಾಮಟ್ಟದ ಸಮಿತಿ ಸದಸ್ಯರನ್ನು ಠಾಣೆ ವ್ಯಾಪ್ತಿಯಲ್ಲಿ ನಡೆಯುವ ಪ.ಜಾತಿ, ಪಂಗಡಗಳ ಕುಂದು ಕೊರತೆಗಳ ಸಭೆಗೆ ಆಹ್ವಾನಿಸಿದರೆ ಇದರಿಂದ ಸ್ಥಳಿಯ ಸಮಸ್ಯೆ ಬಗೆಹರಿಸಲು ಸಾಧ್ಯ ಎಂದು ತಿಳಿಸಿದರು.
ಎಸ್ಸಿಪಿ ಹಾಗೂ ಟಿಎಸ್ಪಿ ಅನುದಾನದಲ್ಲಿ ಜಿಲ್ಲೆಯಲ್ಲಿ ನಿಮಾರ್ಣವಾಗಿರುವ ಸಮುದಾಯ ಭವನಗಳ ನಿರ್ವಹಣೆಯನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಿರ್ವಹಣಾ ಸಮಿತಿಯ ಮೂಲಕ ಸಮರ್ಪಕವಾಗಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಕೆಲ ಹಾಸ್ಟೆಲ್ಗಳ ಜಮೀನು ಒತ್ತುವರಿಯಾಗಿದ್ದು, ತಕ್ಷಣವೇ ತೆರವುಗೊಳಿಸಲು ಕ್ರಮವಹಿಸಬೇಕು ಎಂದು ಉಸ್ತುವಾರಿ ಸಮಿತಿ ಸದಸ್ಯ ಎಂ.ಮುನಿರಾಜು ಆಗ್ರಹಿಸಿದರು. ಸುಗಟೂರಿನ ವಿದ್ಯಾರ್ಥಿನಿಲಯಗಳಲ್ಲಿ ವಾರಾಂತ್ಯಗಳಲ್ಲಿ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಿಲಯಪಾಲಕರಿಗೆ ನೋಟಿಸ್ ಜಾರಿ ಮಾಡಲಾಗುವುದು ಎಂದು ಸಂಬಂಧಿತ ಅಧಿಕಾರಿ ತಿಳಿಸಿದರು.
ಕಸಬಾ ತಾಲೂಕಿನ ಅಣ್ಣಿಹಳ್ಳಿ ಗ್ರಾಮ ಪಂಚಾಯಿತಿಯ ಗ್ರಾಮವೊಂದರಲ್ಲಿ ಪರಿಶಿಷ್ಟ ಜಾತಿ ಕಾಲನಿಯಲ್ಲಿ ರಸ್ತೆಗೆ ಅಡ್ಡಲಾಗಿ ಕಸ ಸಂಗ್ರಹಣೆ ಆಗುತ್ತಿದ್ದು, ದುರ್ವಾಸನೆಯಿಂದಾಗಿ ಓಡಾಡಲು ಸಾಧ್ಯವಾಗುತ್ತಿಲ್ಲ ಎಂದು ಎಸ್ಸಿ ಮತ್ತು ಎಸ್ಟಿ ಜಿಲ್ಲಾ ಸಮಿತಿ ಸದಸ್ಯ ಎಂ. ಮಂಜುನಾಥ್ ಸಭೆಗೆ ತಿಳಿಸಿದರು. ಸಂಬಂಧಿತ ಪಿಡಿಒ ತಕ್ಷಣವೇ ಕ್ರಮವಹಿಸಿ, ಜಾಗದಲ್ಲಿ ಪೈಪ್ಲೈನ್ ಅಳವಡಿಸಲು ಕ್ರಮ ಕೈಗೊಂಡು ಅನುಪಾಲನಾ ವರದಿ ಸಲ್ಲಿಸಲು ಡಿಸಿ ತಿಳಿಸಿದರು.
ಬಾಕ್ಸ್)))
ಪ್ರತಿ ಠಾಣೆಯಲ್ಲೂ ಸಭೆ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಜನರ ಮೇಲೆ ಹಲ್ಲೆ, ದೌರ್ಜನ್ಯಗಳು ನಡೆದರೆ ತಕ್ಷಣವೇ ಕಾನೂನು ಕ್ರಮ ಕೈಗೊಳ್ಳಲಾಗುವುದು ಹಾಗೂ ಪ್ರತಿ ಪೊಲೀಸ್ ಠಾಣೆಯಲ್ಲಿ ಕುಂದು ಕೊರತೆ ಸಭೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ. ನಿಖಿಲ್ ತಿಳಿಸಿದರು.
10 ಕೆ.ಎಲ್.ಆರ್. 04
ಕೋಲಾರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಎಸ್ಸಿ ಮತ್ತು ಎಸ್ಟಿ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆಲ್ಲಿ ಡಿಸಿ ಡಾ.ಎಂ.ಆರ್.ರವಿ, ಎಸ್ಪಿ ಬಿ.ನಿಖಿಲ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸನ್, ಜಿಪಂ ಸಿಇಒ ಡಾ. ಪ್ರವಿಣ್ ಪಿ. ಬಾಗೇವಾಡಿ, ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ಶಾಂತರಾಜು, ಅಪರ ಜಿಲ್ಲಾಧಿಕಾರಿ ಮಂಗಳಾ, ಉಪವಿಭಾಗಾಧಿಕಾರಿ ಡಾ. ಮೈತ್ರಿ ಇದ್ದರು.