

ಬೆಂಗಳೂರು: ಧೂಮಪಾನ ಮಾಡದ ಮಕ್ಕಳು, ಮಹಿಳೆಯರು ಮತ್ತು ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವ ಸಲುವಾಗಿ ಕೋಟ್ಪಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವಂತೆ ರಾಜ್ಯ ಕಾನೂನು ಸೇವಾ ಮಂಡಳಿ ಉಪಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಘವೇಂದ್ರ ಶೆಟ್ಟಿಗಾರ್ ತಿಳಿಸಿದರು.
ಬಿಬಿಎಂಪಿಯ ದಕ್ಷಿಣ ವಲಯ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ನಡೆದ ತರಬೇತಿ ಕಾರ್ಯಗಾರ ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಕೋಟ್ಪಾ ಕಾಯ್ದೆ ಬಗ್ಗೆ ನಾಗರಿಕರಲ್ಲಿ ಅರಿವು ಮೂಡಿಸಿ, ಕಾಯ್ದೆ ಉಲ್ಲಂಘಿಸುವವರ ವಿರುದ್ದ ದಂಡ ಹಾಗೂ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ಪೀಳಿಗೆಗೆ ಉತ್ತಮ ಸಮಾಜವನ್ನು ನಿರ್ಮಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಕಾರ್ಯಕ್ರಮ ಅಧಿಕಾರಿ ಡಾ. ಕುಮಾರ್ ಮಾತನಾಡಿ, ಶಾಲಾ-ಕಾಲೇಜು ಪಕ್ಕದಲ್ಲಿ ತಂಬಾಕು ಮಾರಾಟ ಮಾಡದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಕಾಯ್ದೆ ಉಲ್ಲಂಘನೆ ಮಾಡುವ ಸ್ಥಳಗಳಿಗೆ ಪಾಲಿಕೆ ಆರೋಗ್ಯಾಧಿಕಾರಿಗಳು ಹಾಗೂ ಪೊಲೀಸ್ ಸಹಯೋಗದೊಂದಿಗೆ ಭೇಟಿ ನೀಡಿ ತಪಾಸಣೆ ಮಾಡಿ ದಂಡ ವಿಧಿಸಲಾಗುವುದು ಎಂದರು.
ರಸ್ತೆ ಬದಿಯ ಸಣ್ಣ ಸಣ್ಣ ಅಂಗಡಿಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದರ ಮೇಲೆ ನಿಗಾವಹಿಸಿ ತಡೆಯಬೇಕು. ಬಾರ್ ಮತ್ತು ರೆಸ್ಟೊರೆಂಟ್, ಹುಕ್ಕಾಬಾರ್, ತಂಬಾಕು ಉತ್ಪನ್ನ ಮಾರಾಟಗಾರರು ಕಾಯ್ದೆ ಉಲ್ಲಂಘಿಸಿದರೆ ಕ್ರಮ ಜರುಗಿಸಬೇಕು.
- ಬದ್ರಿನಾಥ್, ಹಿರಿಯ ಪೊಲೀಸ್ ಅಧಿಕಾರಿ