

ಹಾವೇರಿ: ಸೆಮಿಸ್ಟರ್ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ಇಂಜಿನಿಯರಿಂಗ್ ವಿದ್ಯಾರ್ಥಿ (Engineering Student) ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ದೇವಗಿರಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಉಲ್ಲಾಸ್ ವೀರಪ್ಪ ಉದಲಿ (21) ಎಂದು ಗುರುತಿಸಲಾಗಿದ್ದು, ಇವರು ದೇವಗಿರಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ (Engineering College) ಎರಡನೇ ವರ್ಷ ವ್ಯಾಸಂಗ ಮಾಡುತ್ತಿದ್ದರು.
ಘಟನೆಯ ಕುರಿತು ಮಾಹಿತಿ ನೀಡಿರುವ ಹಾವೇರಿ ಗ್ರಾಮೀಣ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು, ಮೃತ ವಿದ್ಯಾರ್ಥಿ ಉಲ್ಲಾಸ್ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲ್ಲೂಕಿನ ನಾವಲಗಟ್ಟಿ ನಿವಾಸಿಯಾಗಿದ್ದು, ದೇವಗಿರಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ (Engineering College) ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್ ವ್ಯಾಸಂಗ ಮಾಡುತ್ತಿದ್ದರು.
ಕೆಲ ದಿನಗಳ ಹಿಂದೆ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿತ್ತು. ನಾಲ್ಕನೇ ಸೆಮಿಸ್ಟರ್ನ ಒಂದು ವಿಷಯದಲ್ಲಿ ಫೇಲ್ ಆಗಿದ್ದರು. ಈ ಹಿನ್ನೆಲೆಯಲ್ಲಿ ಮನನೊಂದು ಉಲ್ಲಾಸ್ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೊದಲಿಗೆ ಉಲ್ಲಾಸ್ ಕಾಣೆಯಾಗಿದ್ದರ ಬಗ್ಗೆ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿದಾಗ ಅವರ ವಾಚ್ ಕೆರೆಯ ದಂಡೆಯಲ್ಲಿ ಪತ್ತೆಯಾಗಿತ್ತು. ವಾಚ್ ಆಧಾರಿಸಿ ಕೆರೆಯಲ್ಲಿ ಹುಡುಕಾಟ ನಡೆಸಿದಾಗ ವಿದ್ಯಾರ್ಥಿ ಉಲ್ಲಾಸ್ ಶವ ಕೆರೆಯಲ್ಲಿ ಪತ್ತೆಯಾಗಿತ್ತು. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.