ಕೂಡಿಗೆ ಶಾಲೆಯಲ್ಲಿ ಆಂಗ್ಲ ಮಾಧ್ಯಮಕ್ಕೆ ಚಾಲನೆ

ಕೂಡಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಶಾಸಕ ಡಾ.ಮಂತರ್ ಗೌಡ  ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಿಸಿದರು. ವಿ.ಪಿ.ಶಶಿಧರ್, ಎಸ್.ಭಾಗ್ಯಮ್ಮ, ಡಿ.ಭಾಸ್ಕರ್ ನಾಯಕ್ ಇತರರಿದ್ದರು.
ಕೂಡಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಶಾಸಕ ಡಾ.ಮಂತರ್ ಗೌಡ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಿಸಿದರು. ವಿ.ಪಿ.ಶಶಿಧರ್, ಎಸ್.ಭಾಗ್ಯಮ್ಮ, ಡಿ.ಭಾಸ್ಕರ್ ನಾಯಕ್ ಇತರರಿದ್ದರು.
Published on

ಕುಶಾಲನಗರ: ಶಾಲಾ ಶಿಕ್ಷಣ ಇಲಾಖೆ ಹಾಗೂ ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವತಿಯಿಂದ ಎಸ್‌ಡಿಎಂಸಿ ಸಹಭಾಗಿತ್ವದಲ್ಲಿ ತಾಲೂಕಿನ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಸಾಲಿನಿಂದ ಒಂದನೇ ತರಗತಿ ಆಂಗ್ಲ ಮಾಧ್ಯಮಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.

ತಾಲೂಕಿನಲ್ಲಿ ಪ್ರಸಕ್ತ ವರ್ಷ 17 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆರಂಭಗೊಂಡ ಒಂದನೇ ತರಗತಿಯ ಆಂಗ್ಲ ಮಾಧ್ಯಮಕ್ಕೆ ಡಿಜಿಟಲ್ ಮಾದರಿಯಲ್ಲಿ ವರ್ಚುವಲ್ ಮೂಲಕ ಚಾಲನೆ ನೀಡಿ ಮಾತನಾಡಿದ ಶಾಸಕ ಡಾ.ಮಂತರ್ ಗೌಡ, ಮಕ್ಕಳು ನಮ್ಮ ಹೆಮ್ಮೆ. ಅವರಿಗಾಗಿ ಎಂತಹ ತ್ಯಾಗಕ್ಕಾದರೂ ಸಿದ್ಧ. ಎಸ್‌ಡಿಎಂಸಿ ಮತ್ತು ಶಿಕ್ಷಣ ಇಲಾಖೆಯ ಸಹಭಾಗಿತ್ವದಲ್ಲಿ ಕೆಲಸ ಮಾಡಿದರೆ ಶಾಲೆ ಅಭಿವೃದ್ಧಿ ಆಗುತ್ತದೆ. ಆಂಗ್ಲ ಮಾಧ್ಯಮ ತೆರೆದಿರುವುದು ಉತ್ತಮ ಬೆಳವಣಿಗೆ. ಇದರಿಂದ ಮಕ್ಕಳ ಕಲಿಕೆಗೆ ಸಹಕಾರಿ ಎಂದರು.

ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಬೇಕೆಂಬ ನಿಟ್ಟಿನಲ್ಲಿ ಸರ್ಕಾರ ಇದೀಗ ಒತ್ತು ನೀಡಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ವಿಶೇಷ ಕಾಳಜಿಯಿಂದ ರಾಜ್ಯದಲ್ಲಿ ಈ ವರ್ಷ ಹೆಚ್ಚು ಶಾಲೆಗಳಲ್ಲಿ ಆಂಗ್ಲ ಮಾಧ್ಯಮದ ತರಗತಿಗಳನ್ನು ಆರಂಭಿಸಲಾಗುತ್ತಿದೆ ಎಂದರು.

ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಬೇಕು. ಆ ಮೂಲಕ ಅವರನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಬೇಕು ಎಂದ ಅವರು, ಕೊಡಗಿನಲ್ಲಿ ಉತ್ತಮ ಶಿಕ್ಷಣ ನೀಡಲಾಗುತ್ತಿದೆ ಎಂಬುದೇ ಜಿಲ್ಲೆಯ ಹೆಮ್ಮೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಉತ್ತಮ ಫಲಿತಾಂಶ ಬಂದಿರುವುದೇ ಇದಕ್ಕೆ ಸಾಕ್ಷಿ ಎಂದು ಹರ್ಷ ವ್ಯಕ್ತಪಡಿಸಿದರು.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಇಂಗ್ಲಿಷ್ ಭಾಷೆ ಅನಿವಾರ್ಯವಾಗಿದ್ದು, ಇದನ್ನು ನಿತ್ಯ ಜೀವನದಲ್ಲೂ ಬಳಕೆ ಮಾಡುವಂತಾಗಬೇಕು. ಕನ್ನಡದ ಜತೆಗೆ ಇಂಗ್ಲಿಷ್ ವಿದ್ಯಾಭ್ಯಾಸಕ್ಕೂ ವಿಶೇಷ ಒತ್ತು ಕೊಡಬೇಕು ಎಂದ ಅವರು, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದು ಪಾಲಕರ ಆದ್ಯ ಕರ್ತವ್ಯವಾಗಬೇಕು. ಆಗ ಮಾತ್ರ ದೇಶದ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಶಿಕ್ಷಣ ಮನುಷ್ಯನ ಬದುಕಿಗೆ ಅಡಿಪಾಯವಿದ್ದಂತೆ. ಇಂಗ್ಲಿಷ್ ಮಾಧ್ಯಮ, ಇಂಗ್ಲಿಷ್‌ನಲ್ಲಿ ವ್ಯವಹಾರ, ಔದ್ಯೋಗಿಕ ಕ್ಷೇತ್ರಕ್ಕೆ ಆಂಗ್ಲ ಮಾಧ್ಯಮ ಅನಿವಾರ್ಯ ಎಂದ ಅವರು, ಕೂಡಿಗೆಯ ಈ ಶಾಲೆಯು ಪ್ರತಿಷ್ಠಿತ ಶಾಲೆಯಾಗಿದ್ದು, ಭವಿಷ್ಯದಲ್ಲಿ ಈ ಶಾಲೆಯು ಮತ್ತಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಆಶಿಸಿದರು.

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಬಗ್ಗೆ ಚಿಂತನೆ ನಡೆಸಿತ್ತು. ಅಂತಿಮವಾಗಿ ಕನ್ನಡ ಮಾಧ್ಯಮ ಶಾಲೆಯಲ್ಲೇ ಇಂಗ್ಲಿಷ್ ಮಾಧ್ಯಮ ಆರಂಭಿಸಿರುವುದು ದೂರದೃಷ್ಟಿ ಯೋಜನೆ. ಇದರಿಂದ ಜನಸಾಮಾನ್ಯರ ಮಕ್ಕಳೂ ಕೂಡ ಇಂಗ್ಲಿಷ್ ಮಾಧ್ಯಮದಲ್ಲಿ ಓದಬಹುದಾಗಿದೆ ಎಂದು ಹೇಳಿದರು.

ಸರ್ಕಾರಿ ಶಾಲೆಗಳು ಪ್ರಸ್ತುತ ಅನೇಕ ರೀತಿಯ ಸವಾಲುಗಳನ್ನು ಎದುರಿಸುತ್ತಿದೆ. ಆದರೂ ಸಹ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವ ಕೆಲಸ ಆಗುತ್ತಿದ್ದು, ಆ ಮೂಲಕ ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯಬೇಕಿದೆ ಎಂದು ಸಲಹೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಭಾಗ್ಯಮ್ಮ ಮಾತನಾಡಿ, ಸೋಮವಾರಪೇಟೆ ತಾಲೂಕಿನ 17 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಲಾಗುತ್ತಿದೆ. ಒಂದು ಕಡೆ ಕನ್ನಡ ಪ್ರಾಥಮಿಕ ಶಾಲೆಗಳು ಮುಚ್ಚುವ ಪರಿಸ್ಥಿತಿ ಇದ್ದು, ಇಂತಹ ಸಂದರ್ಭದಲ್ಲಿ ಆಂಗ್ಲ ಮಾಧ್ಯಮ ತರಗತಿಗಳನ್ನು ಆರಂಭಿಸಿರುವುದು ಒಳ್ಳೆಯ ಬೆಳವಣಿಗೆ. ತಾಲೂಕಿನಲ್ಲಿ ಪ್ರಸಕ್ತ ಸಾಲಿನಲ್ಲಿ ಎಲ್‌ಕೆಜಿಗೆ 112, ಯುಕೆಜಿಗೆ 128 ಮತ್ತು ಒಂದನೇ ತರಗತಿಗೆ 212 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಆಂಗ್ಲ ಮಾಧ್ಯಮ ಬೋಧಿಸುವ ಶಿಕ್ಷಕರಿಗೆ ಇಲಾಖೆಯ ವತಿಯಿಂದ ಉತ್ತಮ ತರಬೇತಿ ನೀಡಲಾಗುತ್ತಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ಉತ್ತಮ ಸಾಧನೆ ಮಾಡಲಾಗಿದ್ದು, ಉತ್ತಮ ಶಿಕ್ಷಕರ ತಂಡ ಇದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸುವ ಮತ್ತು ಗ್ರಾಮಾಂತರ ಪ್ರದೇಶದ ಮಕ್ಕಳಲ್ಲಿ ಆಂಗ್ಲಭಾಷಾ ಜ್ಞಾನ ಬೆಳೆಸುವ ದಿಸೆಯಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭಿಸಲಾಗುತ್ತಿದೆ ಎಂದರು.

ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ಭಾಸ್ಕರ್ ನಾಯಕ್ ಮಾತನಾಡಿ, ಕೂಡಿಗೆ ವ್ಯಾಪ್ತಿಯಲ್ಲಿ ಹೆಚ್ಚು ಶಿಕ್ಷಣ ಸಂಸ್ಥೆಗಳು ಇದ್ದು ಉತ್ತಮ ಶಿಕ್ಷಣ ನೀಡುತ್ತಿವೆ. ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯಲ್ಲಿ ಈಗ 2 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಲಾಗಿದ್ದು, ಚಿಕ್ಕತ್ತೂರು ಮತ್ತಿತರ ಕಡೆಗಳಲ್ಲಿ ಇನ್ನೂ 2 ಆಂಗ್ಲ ಮಾಧ್ಯಮ ತರಗತಿಗಳನ್ನು ಆರಂಭಿಸಬೇಕು ಎಂದು ಮನವಿ ಮಾಡಿದರು.

ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸುವ ಮೂಲಕ ಮಕ್ಕಳಲ್ಲಿ ಇಂಗ್ಲಿಷ್ ಜ್ಞಾನ ಬೆಳೆಸಲು ಆದ್ಯತೆ ನೀಡಲಾಗುತ್ತಿದೆ. ಈ ದಿಸೆಯಲ್ಲಿ ಆಂಗ್ಲ ಮಾಧ್ಯಮ ಮಕ್ಕಳಿಗೆ ಸಹಕಾರಿಯಾಗಲಿದೆ. ಈ ಶಾಲೆಯಲ್ಲಿ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ಆರಂಭಿಸುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಮಕ್ಕಳ ದಾಖಲಾತಿ ವೃದ್ಧಿಯಾಗುವುದರ ಜತೆಗೆ ಸರ್ಕಾರಿ ಶಾಲೆಯ ಬಲವರ್ಧನೆಗೆ ಸಹಕಾರಿಯಾಗಲಿದೆ ಎಂದು ಹೇಳಿದರು.

ಡಿಡಿಪಿಐ ಸಿ.ರಂಗಧಾಮಪ್ಪ ಮಾತನಾಡಿ, ಸರ್ಕಾರದ ಸೂಚನೆ ಮೇರೆಗೆ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 47 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದ ಒಂದನೇ ತರಗತಿ ಆರಂಭಿಸಲಾಗುತ್ತಿದೆ ಎಂದರು.

ಶಾಲಾ ಮುಖ್ಯ ಶಿಕ್ಷಕ ಎಸ್.ಎ.ಯೋಗೇಶ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಆರಂಭಿಸಲಾಗುತ್ತಿದ್ದು, ಇದರಿಂದ ಮಕ್ಕಳಿಗೆ ಆಂಗ್ಲ ಭಾಷೆ ಕಲಿಯಲು ಸುಲಭವಾಗುತ್ತದೆ ಎಂದರು.

ಇದೇ ವೇಳೆ ಮಕ್ಕಳಿಗೆ ಪಠ್ಯಪುಸ್ತಕ ಹಾಗೂ ಸಮವಸ್ತ್ರವನ್ನು ಶಾಸಕ ಡಾ.ಮಂತರ್ ಗೌಡ ವಿತರಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ಎಚ್.ಜೆ.ನಂದೀಶ್ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಎಂ.ವಿ.ಮಂಜೇಶ್, ಕೂಡಿಗೆ ಸರ್ಕಾರಿ ಪಿಯು ಕಾಲೇಜಿನ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸೋಮಶೇಖರ್, ಪ್ರಾಂಶುಪಾಲ ಹಂಡ್ರಂಗಿ ನಾಗರಾಜ್, ಪಿಡಿಒ ಎಂ.ಆರ್.ಸಂತೋಷ್, ಸಿಆರ್‌ಪಿ ಕೆ.ಶಾಂತಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net