

ಕುಂದಾಪುರ: ಇಂಗ್ಲೀಷ್ ವ್ಯಾಮೋಹದಿಂದ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ಪಡೆದರೆ ಮಕ್ಕಳ ಭವಿಷ್ಯ ಚೆನ್ನಾಗಿರುತ್ತದೆ ಎಂದು ಪಾಲಕರು ತಮ್ಮ ಮಕ್ಕಳನ್ನು ಆಂಗ್ಲ ಮಾಧ್ಯಮ ಶಾಲೆಗಳಿಗೆ ಕಳುಹಿಸುತ್ತಿದ್ದಾರೆ. ಇದರಿಂದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಈ ದೃಷ್ಟಿಯಿಂದ ಸರ್ಕಾರಿ ಶಾಲೆಗಳಲ್ಲೂ ಆಂಗ್ಲ ಮಾಧ್ಯಮ ಪ್ರಾರಂಭಿಸಲಾಗಿದೆ ಎಂದು ಸಾರಿಗೆ ಮತ್ತು ಧಾರ್ಮಿಕ ದತ್ತಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ಗೋಪಾಡಿ ಶ್ರೀನಿವಾಸ ರುಕ್ಮಿಣಿ ಫೌಂಡೇಶನ್ ಮತ್ತು ಕೋಟೇಶ್ವರ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗ ಶತಮಾನೋತ್ಸವ ಸಮಿತಿ ಜಂಟಿಯಾಗಿ ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಸುಸಜ್ಜಿತವಾದ ಮತ್ತು ಆಧುನಿಕ ಸೌಲಭ್ಯಗಳನ್ನು ಒಳಗೊಂಡ ಗೋಪಾಡಿ ರುಕ್ಮಿಣಿ ಶ್ರೀನಿವಾಸ ರಂಗ ಮಂಟಪವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು. ಶ್ರೀ ಸೋದೆ ವಾದಿರಾಜ ಮಠಾಧೀಶ ಶ್ರೀ ವಿಶ್ವವಲ್ಲಭ ತೀರ್ಥರು ಆಶೀರ್ವಚನ ನೀಡಿದರು. ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಅಧ್ಯಕ್ಷತೆ ವಹಿಸಿದ್ದರು. ಗೋಪಾಡಿ ರುಕ್ಮಿಣಿ ಶ್ರೀನಿವಾಸ ರಂಗ ಮಂಟಪವನ್ನು ನಿರ್ಮಿಸಿಕೊಟ್ಟ ಗೋಪಾಡಿ ಶ್ರೀನಿವಾಸ ರಾವ್ ದಂಪತಿ ಹಾಗೂ ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಶಾಲೆಯ ಶತಮಾನೋತ್ಸವ ಸಮಿತಿ ವತಿಯಿಂದ ಗೌರವಿಸಲಾಯಿತು. ಕೋಟೇಶ್ವರ ಗ್ರಾಪಂ ಅಧ್ಯಕ್ಷೆ ರಾಗಿಣಿ ದೇವಾಡಿಗ, ಗೋಪಾಡಿ ಶ್ರೀನಿವಾಸ ರುಕ್ಮಿಣಿ ಫೌಂಡೇಶನ್ ಸಂಸ್ಥಾಪಕ ಗೋಪಾಡಿ ಶ್ರೀನಿವಾಸ ರಾವ್, ಟ್ರಸ್ಟ್ ಅಧ್ಯಕ್ಷೆ ರುಕ್ಮಿಣಿ ಜಿ., ಕರ್ನಾಟಕ ಪಬ್ಲಿಕ್ ಸ್ಕೂಲ್ ಶತಮಾನೋತ್ಸವ ಸಮಿತಿ ಅಧ್ಯಕ್ಷ ಶ್ರೀಧರ ವಿಠಲ ಕಾಮತ್, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ ಉಡುಪ, ಮಾಜಿ ಸಚಿವರಾದ ಅಭಯಚಂದ್ರ ಜೈನ್, ವಿನಯಕುಮಾರ್ ಸೊರಕೆ, ಸಮಾಜ ಸೇವಕ ದಿನೇಶ್ ಹೆಗ್ಡೆ ಮೊಳಹಳ್ಳಿ, ಮುನಿಯಾಲು ಉದಯ ಕುಮಾರ್ ಶೆಟ್ಟಿ, ಪ್ರಸಾದ್ ರಾಜ್ ಕಾಂಚನ್, ಕುಂದಾಪುರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ, ಅಶೋಕ ಕಾಮತ್, ಶಾಲೆಯ ಮುಖ್ಯಶಿಕ್ಷಕರು ಮತ್ತಿತರರು ಉಪಸ್ಥಿತರಿದ್ದರು. ಪತ್ರಕರ್ತ ಗಣೇಶ ಬೀಜಾಡಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯ ಹಾಗೂ ಶಿಕ್ಷಕರ ಕೊರತೆ ಇರುವ ಶಾಲೆಗಳಿಗೆ ಅತಿಥಿ ಶಿಕ್ಷಕರನ್ನು ನಿಯೋಜಿಸಲು ಪ್ರಯತ್ನಿಸಬೇಕು. ಚುನಾಯಿತ ಜನಪ್ರತಿನಿಧಿಗಳ ಜೊತೆಗೆ ಊರಿನವರು ಸಹಕಾರ ನೀಡಬೇಕು. ಬೇರೆ ಬೇರೆ ನಗರಗಳಲ್ಲಿ ಹೋಗಿ ವಾಸ ಮಾಡಿಕೊಂಡಿರುವವರು ತಮ್ಮ ಊರಿನ ಶಾಲೆಗಳ ಅಭಿವೃದ್ಧಿಗೆ ನೆರವಾಗಬೇಕು. ಸಾರ್ವಜನಿಕರು ಮನಸ್ಸು ಮಾಡಿದರೆ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ಸಾಧ್ಯವಿದೆ -ರಾಮಲಿಂಗಾ ರೆಡ್ಡಿ, ಸಚಿವ