

ಸರಗೂರು: ಪರಿಸರದ ಬಗ್ಗೆ ಜಾಗೃತಿ ಮೂಡಿಸುವುದರೊಂದಿಗೆ ಪರಿಸರವನ್ನು ರಕ್ಷಿಸುವ ನಿಟ್ಟಿನಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಗುತ್ತಿದ್ದು, ಜೀವಿಗಳ ಪೋಷಣೆಯಲ್ಲಿ ಪರಿಸರ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಆಗತ್ತೂರು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಬಂಗಾರಯ್ಯ ತಿಳಿಸಿದರು.
ತಾಲೂಕಿನ ಸಾಗರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಗತ್ತೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ವಿಶ್ವ ಪರಿಸರ ದಿನವನ್ನು ಸಸಿ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿ, ಪರಿಸರ ಸಮೃದ್ಧಿ ಆರೋಗ್ಯಕರ ಜೀವನ ಮತ್ತು ಭೂಮಿಯ ಮೇಲಿನ ಪ್ರತಿ ಜೀವಿಯ ಜೀವನದ ಅಸ್ತಿತ್ವಕ್ಕೆ ಕಾರಣವಾಗಿದೆ ಎಂದರು.
ಮಾನವ, ಪ್ರಾಣಿ-ಪಕ್ಷಿಗಳು ಆಹಾರ, ಗಾಳಿ, ನೀರು ಇತರ ಅಗತ್ಯಗಳಿಗಾಗಿ ಪರಿಸರವನ್ನು ಅವಲಂಬಿಸಿವೆ. ಆದರೆ ಇತ್ತಿಚಿನ ದಿನಗಳಲ್ಲಿ ಮಾನವ ಆಧುನಿಕ ಬದುಕಿನ ಗೀಳಿಗೆ ಬಿದ್ದು ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಮಾನವನ ದುರಾಸೆಯಿಂದಾಗಿ ಗಾಳಿ, ನೀರು, ಮಣ್ಣು ಕಲುಷಿತಗೊಂಡಿದೆ. ಮನುಷ್ಯ ತನ್ನ ಅಭಿವೃದ್ಧಿಗಾಗಿ ತನಗೆ ಅರಿವಿಲ್ಲದಂತೆ ಪರಿಸರವನ್ನು ಹಾಳು ಮಾಡುತ್ತಿದ್ದಾನೆ ಎಂದರು.
ಶಾಲೆ ಮುಖ್ಯ ಶಿಕ್ಷಕ ಸಿದ್ದರಾಜು ಮಾತನಾಡಿ, ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಜ.5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಪ್ರತಿ ವರ್ಷ ಬೇರೆ ಬೇರೆ ಧ್ಯೇಯವಾಕ್ಯದೊಂದಿಗೆ ಆಚರಿಸಲಾಗುತ್ತದೆ ಎಂದು ಹೇಳಿದರು.
ಪ್ರತಿವರ್ಷ 143ಕ್ಕೂ ಹೆಚ್ಚು ದೇಶಗಳು ಈ ದಿನದಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತವೆ. ಪ್ರಮುಖ ಸಂಸ್ಥೆಗಳು, ಎನ್‌ಜಿಒಗಳು, ಸಮುದಾಯಗಳು, ಸರ್ಕಾರಗಳು ವಿಶ್ವಾದ್ಯಂತ ಪರಿಸರ ದಿನವನ್ನು ವಿವಿಧ ರೀತಿಯಲ್ಲಿ ಆಚರಿಸುತ್ತವೆ ಎಂದರು.
ಸಾಗರೆ ಗ್ರಾಪಂ ಅಧ್ಯಕ್ಷೆ ವಸಂತಾ, ಎಸ್‌ಡಿಎಂಸಿ ಅಧ್ಯಕ್ಷ ಮಂಟಚಾರಿ, ಗ್ರಾಪಂ ಸದಸ್ಯರಾದ ಸಂತೋಷ್, ಚಂದ್ರಮ್ಮ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ನೋಡಲ್ ಅಧಿಕಾರಿ ದೇವರಾಜು, ಹಂಚೀಪುರ ವಲಯದ ಮೇಲ್ವಿಚಾರಕಿ ಸಲ್ಮಾ, ಗ್ರಾಪಂ ಬಿಲ್ ಕಲೆಕ್ಟರ್ ಕಾಂತರಾಜು ಇತರರಿದ್ದರು.