

ಅರಕಲಗೂಡು: ತಾಲೂಕಿನ ಮೋಕಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಇತ್ತೀಚೆಗೆ ಪರಿಸರ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಸ್ಥೆಯ ಕೃಷಿ ಮೇಲ್ವಿಚಾರಕ ಸುನಿಲ್‌ಕುಮಾರ್, ಇತ್ತೀಚಿನ ದಿನಗಳಲ್ಲಿ ಪರಿಸರದ ಅಸಮತೋಲನದಿಂದ ಪ್ರಕೃತಿ ವಿಕೋಪಗಳು ಸಂಭವಿಸುತ್ತಿವೆ. ಇದರ ನಿಯಂತ್ರಣ ಪರಿಸರ ಸಂರಕ್ಷಣೆಯಿಂದ ಸಾಧ್ಯವಾಗುತ್ತದೆ. ನಮ್ಮ ಸುತ್ತಮುತ್ತಲಿನ ವಾತಾವರಣವನ್ನು ಮಲಿನಗೊಳಿಸದೆ ಸ್ವಚ್ಛವಾಗಿಟ್ಟುಕೊಳ್ಳಬೇಕಿದೆ. ಪ್ರಮುಖವಾಗಿ ಶಿಕ್ಷಣ ಕಲಿಯುವ ಶಾಲಾ ವಾತಾವರಣ, ಜನವಸತಿ ಪ್ರದೇಶದಲ್ಲಿ ಪರಿಸರ ಉಳಿಸುವ ನಿಟ್ಟಿನಲ್ಲಿ ಕ್ರಮ ವಹಿಸಬೇಕು ಎಂದು ಹೇಳಿದರು.
ಮುಖ್ಯಶಿಕ್ಷಕ ಕೊಟ್ಟೂರಯ್ಯ ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆಯು ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸಿ ವಿವಿಧ ತರಬೇತಿಗಳನ್ನು ನೀಡುತ್ತಿದೆ. ಮುಖ್ಯವಾಗಿ ಮಕ್ಕಳಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸುತ್ತಿದ್ದು, ಕಾರ್ಯಕ್ರಮದ ಮಹತ್ವವನ್ನು ತಿಳಿದುಕೊಂಡು ಶಾಲೆಯ ಆವರಣದಲ್ಲಿ ಸಸಿ ನೆಟ್ಟು ಅದನ್ನು ಪೋಷಣೆ ಮಾಡಿ ಪರಿಸರ ಬೆಳೆಸಿ ನಾಡನ್ನು ಉಳಿಸಿ ಎಂದು ಕಿವಿಮಾತು ಹೇಳಿದರು.
ಶಾಲಾ ಆವರಣದಲ್ಲಿ ಸಸಿಗಳನ್ನು ನೆಟ್ಟು ನೀರೆರೆಯಲಾಯಿತು. ನೆಟ್ಟ ಗಿಡಗಳ ಪೋಷಣೆಗಾಗಿ ವಿದ್ಯಾರ್ಥಿಗಳ ತಂಡ ರಚಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕುಮಾರ್, ದೈಹಿಕ ಶಿಕ್ಷಣ ಶಿಕ್ಷಕ ಪುರುಷೋತ್ತಮ, ಸಹ ಶಿಕ್ಷಕಿ ಗೌತಮಿ, ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಬೇಬಿ ಇತರರಿದ್ದರು.