

ಚನ್ನರಾಯಪಟ್ಟಣ: ಶೋಷಿತರು, ಅಸಂಘಟಿತರು, ತುಳಿತಕ್ಕೆ ಒಳಗಾದವರಿಗೆ ಸಮಾಜದಲ್ಲಿ ಸರಿಸಮಾನವಾದ ಸ್ಥಾನಮಾನ ಮತ್ತು ಹಕ್ಕುಗಳನ್ನು ನೀಡುವ ಮೂಲಕ ಮುಖ್ಯವಾಹಿನಿಗೆ ತರಬೇಕೆಂದು ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷೆ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಎ.ಅರುಣಾಕುಮಾರಿ ತಿಳಿಸಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ವರಿಗೂ ಸಮಪಾಲು ಸಮಬಾಳು ಎಂಬ ಪರಿಕಲ್ಪನೆಯಲ್ಲಿ ಸಂವಿಧಾನ ರಚನೆಯಾಗಿದೆ. ಹಾಗೆಯೇ ಆರ್ಥಿಕವಾಗಿ ಹಿಂದುಳಿದವರು ಮತ್ತು ಮುಂದುವರಿದವರು ಎಂಬ ಭೇದಭಾವಕ್ಕೆ ಅವಕಾಶ ಇಲ್ಲದಂತೆ ನೋಡಿಕೊಳ್ಳುವ ಉದ್ದೇಶದಿಂದ ಸಾಮಾಜಿಕ ನ್ಯಾಯ ಅಸ್ತಿತ್ವದಲ್ಲಿದೆ, ಸಂವಿಧಾನ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುವಲ್ಲಿ ಪ್ರತಿಯೊಬ್ಬರ ಪ್ರೋತ್ಸಾಹ, ಸಹಕಾರ ಅಗತ್ಯವಿದೆ. ಯಾವುದೇ ಕಾರಣಕ್ಕೂ ಭೇದಭಾವದಿಂದ ಯಾರನ್ನೂ ಕಾಣುವಂತಿಲ್ಲ, ವಿದ್ಯಾರ್ಥಿಗಳು ಸಂವಿಧಾನ ನೀಡಿದಂತಹ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕು ಜತೆಗೆ ತಮ್ಮ ಕರ್ತವ್ಯಗಳ ಬಗ್ಗೆಯೂ ಅರಿತುಕೊಳ್ಳಬೇಕು ಎಂದು ತಿಳಿಸಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಡಾ.ಬಿ.ಎಸ್.ಪೂರ್ಣಿಮಾ ಮಾತನಾಡಿ, ರಾಷ್ಟ್ರದ ಅಭಿವೃದ್ಧಿಗೆ ಸಾಮಾಜಿಕ ನ್ಯಾಯ ಅವಶ್ಯ. ಸಾಮಾಜಿಕ ನ್ಯಾಯವು ಶಾಂತಿಯುತ ಮತ್ತು ಸಮೃದ್ಧ ಸಹಬಾಳ್ವೆಗೆ ಆಧಾರವಾಗಿದೆ. ವಿಶ್ವದಾದ್ಯಂತ ಲಿಂಗ, ವಯಸ್ಸು, ಜನಾಂಗೀಯ, ಧರ್ಮ, ಸಂಸ್ಕೃತಿ, ಬಡತನ, ನಿರುದ್ಯೋಗ, ಶಿಕ್ಷಣ, ವಲಸೆ, ಆರ್ಥಿಕ ಮುಂತಾದ ಸಾಮಾಜಿಕ ಸಮಸ್ಯೆಗಳು ಗಂಭೀರವಾಗಿದೆ. ಇಂಥ ಸಮಸ್ಯೆಗಳನ್ನು ತೊಡೆದು ಹಾಕುವ ಪ್ರಯತ್ನಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಲು ಆಗಮಿಸಿದ್ದ ವಕೀಲೆ ಚಂದನ ಸಾಮಾಜಿಕ ನ್ಯಾಯ ಕುರಿತು ಸವಿವರವಾಗಿ ತಿಳಿಸಿಕೊಟ್ಟರು, ತಾಲೂಕು ವಕೀಲರ ಸಂಘದ ಸಹ ಕಾರ್ಯದರ್ಶಿ ಶ್ವೇತಾ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ.ಮುನಿರಾಜು, ಡಾ.ವಾಸುದೇವ ಪ್ರಸಾದ್, ನ್ಯಾಯಾಂಗ ಇಲಾಖೆಯ ಸಿಬ್ಬಂದಿ ಭಗವಾನ್ ಸೇರಿದಂತೆ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.