

ಚಿತ್ರದುರ್ಗ: ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯಲ್ಲಿ ಸಮಾಜದ ಪ್ರತಿಯೊಬ್ಬರ ಜವಾಬ್ದಾರಿ ಇದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಕೆ.ಗಿರೀಶ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯಿತಿ, ಪೊಲೀಸ್, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಸಂಯುಕ್ತಾಶ್ರಯದಲ್ಲಿ ಜಿಪಂ ಸಭಾಂಗಣದಲ್ಲಿ ಶುಕ್ರವಾರ ನಿರೀಕ್ಷಕರಿಗೆ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.
ಬಾಲಕಾರ್ಮಿಕ ಪದ್ಧತಿ ಕುರಿತು ಸಂವಿಧಾನದಲ್ಲಿ ಹೇಳಿದ ಅಂಶವನ್ನೇ ಪ್ರತ್ಯೇಕವಾಗಿ ಕಾನೂನು ಮಾಡಲಾಗಿದೆ. ಈ ವಿಷಯದಲ್ಲಿ ವಿಫಲಗೊಂಡಲ್ಲಿ ಸಂವಿಧಾನದ ಉಲ್ಲಂಘನೆಯಾಗುತ್ತದೆ ಎಂದು ಎಚ್ಚರಿಸಿದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ ಮಾತನಾಡಿ, ಮಕ್ಕಳಿಗೆ ಶಿಕ್ಷಣ, ಆರೋಗ್ಯ ಸಿಗದಿದ್ದರೆ ದೇಶದಲ್ಲಿ ಪ್ರಗತಿ ಸಾಧ್ಯವಿಲ್ಲ. ಹಾಗಾಗಿ ಇಂದಿನ ಮಕ್ಕಳು ಮುಂದಿನ ಪ್ರಜೆಗಳಾಗಲು ಅವರಿಗೆ ಸರಿಯಾದ ಸೌಲಭ್ಯ ದೊರೆಯುವ ವ್ಯವಸ್ಥೆ ಮಾಡುವುದು ನಮ್ಮಗಳ ಹೊಣೆ ಎಂದರು.
ಸಂಪನ್ಮೂಲ ವ್ಯಕ್ತಿ ಕೆ.ರಾಘವೇಂದ್ರ ಭಟ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್.ಬಣಕಾರ್, ಬಾಲಕಾರ್ಮಿಕ ನಿರ್ಮೂಲನೆ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು.