

ಹೂವಿನಹಡಗಲಿ: ಶಿಕ್ಷಕರು ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಕ್ರಿಯಾಯೋಜನೆಯಂತೆ ಕಾರ್ಯನಿರ್ವಹಿಸಬೇಕು ಎಂದು ಬಿಇಒ ಮಹೇಶ್.ವಿ.ಪೂಜಾರ ಹೇಳಿದರು.
ಪಟ್ಟಣದ ಸೊಪ್ಪಿನ ಕಾಳಮ್ಮ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಶನಿವಾರ ಹಮ್ಮಿಕೊಂಡಿದ್ದ ಶೈಕ್ಷಣಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಇದನ್ನೂ ಓದಿ: ಡಿಕೆಶಿ ಹೆಸರು ಹೇಳೋದನ್ನೇ ಮರೆತ ಸಿಎಂ ಸಿದ್ದರಾಮಯ್ಯ
ತಾಲೂಕಿನ ಶಾಲೆಗಳಲ್ಲಿ ಎಸ್ಸೆಸ್ಸೆಲ್ಸಿ ಹಂತದ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಕೇಂದ್ರೀಕರಿಸಿ ಪಟ್ಟಿ ತಯಾರಿಸಲಾಗಿದೆ. ಹಾಗಾಗಿ ಶೈಕ್ಷಣಿಕ ಪ್ರಗತಿಗೆ ಶಿಕ್ಷಕರು ಹೆಚ್ಚು ಆದ್ಯತೆ ನೀಡಬೇಕು. ನಿರಂತರವಾಗಿ ಗೈರಾಗುವ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸಿ ಮರಳಿ ಶಾಲೆಗೆ ಕರೆ ತರುವ ಪ್ರಯತ್ನ ಮಾಡಬೇಕು ಎಂದರು.
ಎಸ್ಸೆಸ್ಸೆಲ್ಸಿ ಶಾಲೆಗಳಲ್ಲಿ ಗುಂಪು ಚರ್ಚೆಯೊಂದಿಗೆ ಬೆಳಗಿನ ಅವಧಿಯಲ್ಲಿ ವಿಶೇಷ ತರಗತಿಗಳನ್ನು ತೆಗೆದುಕೊಳ್ಳಬೇಕು. ಇದರಿಂದ ವಿದ್ಯಾರ್ಥಿಗಳಿಗೆ ಪಾಠಗಳು ಹೆಚ್ಚು ಕಾಲ ನೆನಪಿನಲ್ಲಿ ಇರಲು ಸಾಧ್ಯವಾಗುತ್ತದೆ. ಶಾಲೆಯಲ್ಲಿ ಭಾನುವಾರವೂ ಸಹ ವಿಶೇಷ ತರಗತಿ ತೆಗೆದುಕೊಂಡು ಪ್ರತಿಬಾರಿಯೂ ಸರಣಿ ಕ್ವಿಜ್ ಕಾರ್ಯಕ್ರಮ, ಪಾಲಕರ ಸಭೆ ಆಯೋಜಿಸಬೇಕು. ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಆಗುವಂತೆ ಕ್ರಮವಹಿಸಬೇಕು ಎಂದರು.
ಕ್ಷೇತ್ರ ಸಮನ್ವಯಾಧಿಕಾರಿ ಎ.ಕೋಟೆಪ್ಪ ಮಾತನಾಡಿ, ಎಸ್‌ಎಟಿಎಸ್ ನಲ್ಲಿ ವಿದ್ಯಾರ್ಥಿಗಳ ಹೆಸರು ಅವರ ತಂದೆ, ತಾಯಿ ಹೆಸರು ಹಾಗೂ ಜನ್ಮದಿನಾಂಕ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಲಿ ಎಂದು ತಿಳಿಸಿದರು.
ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ.ಹನುಮಂತಪ್ಪ, ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ಪ್ರಕಾಶ್, ಎಸ್‌ಕೆಜಿಜಿ ಶಾಲೆಯ ಉಪ ಪ್ರಾಚಾರ್ಯ ಕೆ.ಚಂದ್ರೇಗೌಡ, ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿ ಎಚ್.ಮಲ್ಲಿಕಾರ್ಜುನ, ಮುಖ್ಯ ಶಿಕ್ಷಕ ಸುರೇಶ ಅಂಗಡಿ, ತಾಲೂಕು ಸರ್ಕಾರಿ ಅನುದಾನಿತ, ಅನುದಾನರಹಿತ ಮುರಾರ್ಜಿ ವಸತಿ ಶಾಲೆಗಳ ಮುಖ್ಯಶಿಕ್ಷಕರು ಇದ್ದರು.